ಮಂಗಳೂರು : ಕರ್ನಾಟಕದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ತಕ್ಷಣವೇ ನಡೆಸುವಂತೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾಲದಲ್ಲಿ ಚುನಾವಣೆ ನಡೆಸದ ಕಾರಣ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಿದ್ದ ಸುಮಾರು 2133 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ಈ ಆರ್ಥಿಕ ಸಂಕಷ್ಟದಿಂದಾಗಿ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗದೆ ಸಂಕಷ್ಟಕ್ಕೀಡಾಗಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಅಧಿಕಾರ ವಿಕೇಂದ್ರೀಕರಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನೆರೆರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ಮಾದರಿಯಾಗಿವೆ ಎಂದು ಮಜೀದ್ ಅಭಿಪ್ರಾಯಪಟ್ಟರು. ಕೇರಳದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ತಪ್ಪದೇ ಸ್ಥಳೀಯ ಚುನಾವಣೆಗಳು ನಡೆಯುತ್ತಿದ್ದು, ಅಲ್ಲಿನ ಮಾದರಿಯನ್ನು ಕರ್ನಾಟಕ ಸರ್ಕಾರ ಅನುಸರಿಸಬೇಕು. ರಾಜ್ಯದ 27 ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಈ ಅನುದಾನದ ವಿಚಾರದಲ್ಲಿ ಮೌನ ವಹಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅಪಚಾರವನ್ನು ನಿಲ್ಲಿಸಿ ಚುನಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಚುನಾವಣೆಗಳನ್ನು ನಡೆಸದೆ ಆರು ವರ್ಷಗಳೇ ಕಳೆದಿದ್ದು, ಸ್ಥಳೀಯ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಅವರು ಆರೋಪಿಸಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದಿದ್ದರೂ, ಗ್ರಾಮ ಪಂಚಾಯಿತಿಗಳು ಅಸ್ತಿತ್ವದಲ್ಲಿರುವುದರಿಂದ ಕೇಂದ್ರ ಸರ್ಕಾರ ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಹಂತ ಹಂತವಾಗಿ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









