ಮಂಗಳೂರು : ಕರ್ನಾಟಕ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಜನಿವಾರ, ಕೈದಾರ ಹಾಗೂ ಕಿವಿಯೋಲೆಗಳನ್ನು ಬಲವಂತವಾಗಿ ತೆಗೆಸುವ ಮೂಲಕ ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಚಾರ ಎಸಗುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಹಿಂದೂ ಸಂಪ್ರದಾಯದ ಪ್ರತೀಕಗಳನ್ನು ಕಳಚಿಸುವುದು ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದು ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಒಂದು ವರ್ಗದ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಭೇದಭಾವ ಮಾಡುತ್ತಿದೆ ಎಂದು ದೂರಿದ್ದಾರೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿರುವ ಸರ್ಕಾರ, ಪಾರದರ್ಶಕವಾಗಿ ಕಾಣುವ ಕಿವಿಯೋಲೆ ಅಥವಾ ಕೈದಾರಗಳನ್ನು ತೆಗೆಸುತ್ತಿರುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆಗಳು ನಡೆದಿದ್ದರೂ ಸರ್ಕಾರ ಯಾವುದೇ ಪಾಠ ಕಲಿತಿಲ್ಲ, ಬದಲಾಗಿ ಹಿಂದೂ ಸಮಾಜವನ್ನು ಕೆರಳಿಸಿ ಹೋರಾಟಕ್ಕೆ ಇಳಿಯುವಂತೆ ಪ್ರೇರೇಪಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಸರ್ಕಾರ ತಕ್ಷಣವೇ ಇಂತಹ ತಾರತಮ್ಯದ ಕ್ರಮಗಳನ್ನು ನಿಲ್ಲಿಸಿ, ಎಲ್ಲಾ ವಿದ್ಯಾರ್ಥಿಗಳು ನೆಮ್ಮದಿಯಿಂದ ಪರೀಕ್ಷೆ ಬರೆಯಲು ಪೂರಕವಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಈ ಘಟನೆಯು ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಮಾನತೆಯ ಕುರಿತು ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪರಿಸ್ಥಿತಿ ಕೈಮೀರುವ ಮುನ್ನ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು ಎಂದು ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









