ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಇಂದಿನಿಂದ (ಏಪ್ರಿಲ್ 27) ನಾಲ್ಕು ದಿನಗಳ ಕಾಲ ‘ಎಲ್ಲೋ ಅಲರ್ಟ್’ ಘೋಷಿಸಿದೆ. ಏಪ್ರಿಲ್ 30ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯ ಸಮಯದಲ್ಲಿ ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಅತಿಯಾದ ಉರಿ ಬಿಸಿಲು ಮತ್ತು ಸೆಕೆಯ ವಾತಾವರಣವಿತ್ತು. ಭಾನುವಾರ ದಿನವಿಡೀ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆಗಿಂತ 0.3 ಡಿಗ್ರಿಯಷ್ಟು ಏರಿಕೆಯಾಗಿದೆ. ಅದೇ ರೀತಿ ಕನಿಷ್ಠ ತಾಪಮಾನವು 27.1 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ವಾಡಿಕೆಗಿಂತ 1.8 ಡಿಗ್ರಿಯಷ್ಟು ಉಷ್ಣಾಂಶ ಏರಿಕೆ ಕಂಡಿದೆ.
ಈ ನಡುವೆ ಭಾನುವಾರ ರಾತ್ರಿ ಮೂಡುಬಿದಿರೆ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಲಘು ಮಳೆಯಾಗಿರುವುದು ಕಂಡುಬಂದಿದೆ. ಹೆಚ್ಚುತ್ತಿರುವ ತಾಪಮಾನದಿಂದ ಕಂಗೆಟ್ಟಿರುವ ಜನರಿಗೆ ಈ ಮಳೆಯ ಮುನ್ಸೂಚನೆಯು ಕೊಂಚ ತಂಪು ನೀಡುವ ನಿರೀಕ್ಷೆಯಿದೆ. ಆದರೆ ಗುಡುಗು ಮತ್ತು ಬಿರುಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









