ಮಂಗಳೂರು : ಮೆಸ್ಕಾಂನ ಸರ್ವರ್ ಹಾಗೂ N-SOIT ತಂತ್ರಾಂಶದಲ್ಲಿ ಉಂಟಾಗಿರುವ ತೀವ್ರ ತಾಂತ್ರಿಕ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಗೃಹಪ್ರವೇಶದ ತಯಾರಿಯಲ್ಲಿದ್ದ ಸಾರ್ವಜನಿಕರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, CITU, DYFI ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಮೆಸ್ಕಾಂ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿವೆ.
ಹೊಸ ಮನೆಗಳ ವಿದ್ಯುತ್ ಜೋಡಣೆ ಕಾರ್ಯವನ್ನು ಗುತ್ತಿಗೆದಾರರು ತಮ್ಮ ಸ್ವಂತ ಹಣ ವ್ಯಯಿಸಿ ಪೂರ್ಣಗೊಳಿಸಿದ್ದರೂ, ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಅಧಿಕೃತ ಸಂಪರ್ಕ ದೊರೆಯುತ್ತಿಲ್ಲ. ಇದರಿಂದಾಗಿ ಗ್ರಾಹಕರು ಗುತ್ತಿಗೆದಾರರಿಗೆ ನೀಡಬೇಕಾದ ಲಕ್ಷಾಂತರ ರೂಪಾಯಿ ಹಣವನ್ನು ತಡೆಹಿಡಿದಿದ್ದು, ನೂರಾರು ಗುತ್ತಿಗೆದಾರರ ಬದುಕು ದುಸ್ತರವಾಗಿದೆ. ಮೆಸ್ಕಾಂ ಇಲಾಖೆಯ ಬೇಜವಾಬ್ದಾರಿತನದಿಂದಾಗಿ ಗ್ರಾಹಕರು ಮಾನಸಿಕವಾಗಿ ನೊಂದಿದ್ದು, ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಈ ಸಮಸ್ಯೆಯ ಬಗ್ಗೆ ಸಂಘದ ಮುಖಂಡರು ಈಗಾಗಲೇ ಹಲವಾರು ಬಾರಿ ಮೆಸ್ಕಾಂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಗೊಳ್ಳದಿದ್ದಲ್ಲಿ, ವಿವಿಧ ಜನಪರ ಸಂಘಟನೆಗಳ ಜೊತೆಗೂಡಿ ‘ಮೆಸ್ಕಾಂ ಕಚೇರಿ ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘವು ಎಚ್ಚರಿಕೆ ನೀಡಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









