ಮಂಗಳೂರು: ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಾರ್ಥಕ ಹಾದಿಯನ್ನು ಸಂಭ್ರಮಿಸಲು ಚಿತ್ರದುರ್ಗದಲ್ಲಿ ಪಕ್ಷವು ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ. ಇದರ ಭಾಗವಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯಾದ್ಯಂತ ಬಿ.ಎಸ್.ವೈ ಅಭಿಮಾನದ ಅಲೆ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಅಭಿಮಾನೋತ್ಸವದ ಜಿಲ್ಲಾ ಸಂಚಾಲಕರಾದ ಡಿ. ವೇದವ್ಯಾಸ ಕಾಮತ್ ಅವರು ಜಂಟಿಯಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಡಾ. ಭರತ್ ಶೆಟ್ಟಿ ಮತ್ತು ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಸಾಂಕೇತಿಕವಾಗಿ ಜಿಲ್ಲಾ ಕಚೇರಿ ಮುಂಭಾಗದಲ್ಲಿದ್ದ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನದ ಕಿಚ್ಚನ್ನು ಹಚ್ಚಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರಮೇಶ್ ಕಂಡೆಟ್ಟು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಈ ವಾಹನ ಸ್ಟಿಕ್ಕರ್ ಅಭಿಯಾನವು ಸಹಕಾರಿಯಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









