ವಿಟ್ಲ : ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೊಳ್ಳಾಡು ನಿವಾಸಿ 26 ವರ್ಷದ ಮಹಮ್ಮದ್ ಅಸ್ಪೀರ್ ಎಂದು ಗುರುತಿಸಲಾಗಿದೆ. ಈತ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಮೇ 3ರಂದು ಮಧ್ಯಾಹ್ನ ವಿಟ್ಲ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಎಸ್. ನಾಯಕ್ ಮತ್ತು ಅವರ ತಂಡ ವಾಹನಗಳ ತಪಾಸಣೆ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ಅಸ್ಪೀರ್ನನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆತ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಐ ಅವರೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದಾನೆ.
ಆರೋಪಿಯ ವಿಚಿತ್ರ ನಡವಳಿಕೆಯಿಂದ ಸಂಶಯಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಾನು ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ತಕ್ಷಣವೇ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಆತ ಅಮಲು ಪದಾರ್ಥ ಸೇವಿಸಿರುವುದು ದೃಢಪಟ್ಟಿದೆ. ಸದ್ಯ ವಿಟ್ಲ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









