ಮಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಶಾಸಕರ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳು ಬಲಗೊಳ್ಳಬೇಕಾದರೆ ಪರಸ್ಪರ ವಿಶ್ವಾಸದ ಮೇಲೆ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಾಸವಿಲ್ಲದಿದ್ದರೆ ಯಾವುದೇ ವ್ಯವಸ್ಥೆ ಸುಗಮವಾಗಿ ನಡೆಯಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಶಾಸಕರ ಪ್ರಮಾಣವಚನ ಸ್ವೀಕಾರಕ್ಕೆ ಯಾವುದೇ ಉದ್ದೇಶಪೂರ್ವಕ ವಿಳಂಬ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಸ್ಪೀಕರ್, ತಾವು ಬೆಂಗಳೂರಿನಲ್ಲಿದ್ದ ಸಂದರ್ಭದಲ್ಲಿ ಯಾರೂ ತಮ್ಮನ್ನು ಭೇಟಿ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಸಮಯ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇದೊಂದು ವಿಶಿಷ್ಟ ಸನ್ನಿವೇಶವಾಗಿರುವುದರಿಂದ ತಾಂತ್ರಿಕ ವಿಚಾರಗಳ ಬಗ್ಗೆ ಕಾನೂನು ಅಭಿಪ್ರಾಯ ಪಡೆಯುವುದು ಅಗತ್ಯವಾಗಿದೆ. ಸಂವಿಧಾನ ಮತ್ತು ಕಾನೂನಿನ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅವಕಾಶ ನೀಡಲೇಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಕಾನೂನು ಹೋರಾಟಕ್ಕೂ ತಮಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಖಾದರ್, ಸ್ಪೀಕರ್ ಆಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವುದು ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಈ ಸೂಕ್ಷ್ಮ ವಿಚಾರದಲ್ಲಿ ಆತುರ ಪಡುವುದು ಅಥವಾ ಅನಗತ್ಯ ಸಂಶಯ ವ್ಯಕ್ತಪಡಿಸುವುದು ಸರಿಯಲ್ಲ. ಈಗಾಗಲೇ ಈ ಬಗ್ಗೆ ರಾಜ್ಯಪಾಲರು ಸಹ ಕರೆ ಮಾಡಿ ಮಾತನಾಡಿದ್ದು, ಯಾವುದೇ ರೀತಿಯ ತಡೆ ಅಥವಾ ವಿಳಂಬ ಮಾಡುವ ಉದ್ದೇಶ ತಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವಾಗ, ಎಲ್ಲಿ ಮತ್ತು ಯಾರು ತಪ್ಪು ಮಾಡಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









