ಕಡಬ: ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಮತ್ತು ಸುನೀತಾ (21) ಎಂದು ಗುರುತಿಸಲಾಗಿದ್ದು, ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.
ರಜೆಯ ಹಿನ್ನೆಲೆಯಲ್ಲಿ ಐವರು ಸ್ನೇಹಿತೆಯರ ತಂಡವೊಂದು ಗುಂಡ್ಯ ಹೊಳೆಗೆ ಸ್ನಾನಕ್ಕಾಗಿ ಆಗಮಿಸಿತ್ತು. ಈ ವೇಳೆ ನೀರಿಗಿಳಿದ ವಿದ್ಯಾರ್ಥಿನಿಯರಲ್ಲಿ ಇಬ್ಬರು ನೀರಿನ ಆಳವನ್ನು ಸರಿಯಾಗಿ ಅಂದಾಜಿಸದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದ ಇತರ ಸ್ನೇಹಿತೆಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ಸೆಳೆತ ಹೆಚ್ಚಿದ್ದ ಕಾರಣ ಅದು ಸಾಧ್ಯವಾಗದೆ ಕಣ್ಣಮುಂದೆಯೇ ಇಬ್ಬರೂ ಜಲಸಮಾಧಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸ್ಥಳೀಯ ಈಜುಗಾರರ ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಸ್ಥಳದಲ್ಲಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು. ಕಡಬ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









