ಮಂಗಳೂರು : ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಇತ್ತೀಚೆಗೆ ನಡೆದ ಉರುಸ್ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಮುಖಂಡರೊಬ್ಬರು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವಂತೆ ಭಾಷಣ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಂಸ ತಿನ್ನುವುದು ನಮ್ಮ ಹಕ್ಕು ಎಂದು ಹೇಳಿರುವ ಮುಖಂಡನು, ಇದನ್ನು ಪ್ರಶ್ನಿಸಲು ಯಾರಾದರೂ ಬಂದರೆ ಕೈಕಟ್ಟಿಕೊಂಡು ಕೂರದೆ ನಿಮ್ಮದೇ ರೀತಿಯಲ್ಲಿ ಉತ್ತರ ಕೊಡಿ ಎಂದು ಜನರನ್ನು ಪ್ರಚೋದಿಸಿದ್ದಾನೆ ಎಂದು ದೂರಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಅದನ್ನು ಮೀರಿ ಕಾನೂನು ಉಲ್ಲಂಘಿಸುವವರನ್ನು ಕಾನೂನಾತ್ಮಕವಾಗಿ ತಡೆಯುವ ಹಕ್ಕು ನಮಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಎಸ್ಡಿಪಿಐ ಮುಖಂಡನ ವಿರುದ್ಧ ಪೊಲೀಸರು ತಕ್ಷಣವೇ ಸುಮೋಟೋ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಹಿಜಾಬ್ ವಿರುದ್ಧವೂ ಕಿಡಿಕಾರಿದ ಶರಣ್ ಪಂಪ್ವೆಲ್, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಮತ್ತೆ ಅವಕಾಶ ನೀಡಿರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಹಿಂದೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಮಾನತೆ ಕಾಪಾಡುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಿಜಾಬ್ ಅನ್ನು ನಿಷೇಧಿಸಿತ್ತು. ಆದರೆ ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಕೇವಲ ಓಟ್ ಬ್ಯಾಂಕ್ ಮತ್ತು ಧರ್ಮದ ಓಲೈಕೆ ರಾಜಕಾರಣಕ್ಕಾಗಿ ಈ ಆದೇಶವನ್ನು ಬದಲಾಯಿಸಿ, ಮತ್ತೆ ಹಿಜಾಬ್ಗೆ ಮರು-ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಆಪಾದಿಸಿದ್ದಾರೆ. ಸರ್ಕಾರದ ಈ ನಡೆಯಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿಕೊಂಡು ಬರಲಿದ್ದು, ಅಂತಹ ವಿದ್ಯಾರ್ಥಿಗಳಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭವಿಷ್ಯದಲ್ಲಿ ಶಾಲಾ-ಕಾಲೇಜುಗಳ ಆವರಣದಲ್ಲಿ ಯಾವುದೇ ರೀತಿಯ ಸಂಘರ್ಷ ಉಂಟಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿರುವ ಅವರು, ತಕ್ಷಣವೇ ಹಿಜಾಬ್ಗೆ ನೀಡಿರುವ ಅವಕಾಶದ ಆದೇಶವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









