ಬೆಳ್ತಂಗಡಿ : ಪುಂಜಾಲಕಟ್ಟೆ, ಉಪ್ಪಿನಂಗಡಿಯಲ್ಲಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಕೊಳ್ಳಾಡು ನಿವಾಸಿಗಳಾಗಿದ್ದು ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಮತ್ತು 38 ವರ್ಷ ಪ್ರಾಯದ ಜಾಬೀರ್ ಯಾನೆ ಜಾಬೀ ಬಂಧಿತ ಆರೋಪಿಗಳು. ಕಳೆದ ಎಪ್ರಿಲ್ 5 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೇ 15 ರಂದು ಆರೋಪಿ ಹಮೀದ್ ನನ್ನು ವಶಕ್ಕೆ ಪಡೆದ ತನಿಖಾ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ವಶ ಪಡಿಸಿಕೊಂಡಿತ್ತು.
ಆತನ ವಿಚಾರಣೆಯ ವೇಳೆ ನೀಡಿದ ಮಾಹಿತಿಯ ಅಧಾರದಲ್ಲಿ ಜೂನ್ 7 ರಂದು ಮತ್ತೋರ್ವ ಆರೋಪಿ ಜಾಬೀರ್ ಯಾನೆ ಜಾಬೀ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಪುಂಜಾಲಕಟ್ಟೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 68.690 ಗ್ರಾಂ ಚಿನ್ನಾಭರಣ ಮತ್ತು 2 ಲಕ್ಷ ರೂಪಾಯಿ ನಗದು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2025 ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ.
ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ವಿರುದ್ಧ ಈ ಎಎಡು ಪ್ರಕರಣಗಳನ್ನು ಹೊರತುಪಡಿಸಿ ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









