ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಶುಕ್ರವಾರ (ಜೂನ್ 12) ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಒಡ್ಡುತ್ತಿರುವ ಅಡ್ಡಿ ಮತ್ತು ವಿರೋಧವನ್ನು ಖಂಡಿಸಲು ಕರವೇ ಉಡುಪಿ ಜಿಲ್ಲಾ ಘಟಕ ನಿರ್ಧರಿಸಿತ್ತು. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಜಮಾಯಿಸಿದ್ದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ತಮಿಳುನಾಡು ಮುಖ್ಯಮಂತ್ರಿಗಳ ವಾಹನ ಸರಣಿ ಹಾದುಹೋಗುವ ವೇಳೆ ಕಪ್ಪು ಬಾವುಟ ತೋರಿಸಿ ಆಕ್ರೋಶ ವ್ಯಕ್ತಪಡಿಸಲು ಸಿದ್ಧತೆ ಮಾಡಿಕೊಂಡಿದ್ದರು.
ಆದರೆ ಸಿಎಂ ವಿಜಯ್ ಅವರು ಆ ಮಾರ್ಗವಾಗಿ ಬರುವ ಮುನ್ನವೇ ಪರಿಸ್ಥಿತಿಯ ಸುಳಿವು ಅರಿತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಧಾವಿಸಿದರು. ಪ್ರತಿಭಟನಾಕಾರರನ್ನು ತಡೆದು, ಅವರು ಕಪ್ಪು ಬಾವುಟ ಪ್ರದರ್ಶಿಸದಂತೆ ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಇಡೀ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಕಾರ್ಯಾಚರಣೆಯ ವೇಳೆ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ತದನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









