ಉಡುಪಿ : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ತಾವು ಮರಳಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬ ಆಧಾರರಹಿತ ವದಂತಿಗಳಿಗೆ ಶನಿವಾರ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾವೂ ಪಕ್ಷಾಂತರ ಮಾಡಲಿದ್ದಾರೆ ಎಂಬ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಇವೆಲ್ಲವೂ ಕೇವಲ ಊಹಾಪೋಹಗಳು ಎಂದು ಸ್ಪಷ್ಟಪಡಿಸಿದ್ದಾರೆ.
ತಾವು ಅಧಿಕಾರದ ಆಸೆಯಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರಿಲ್ಲ ಎಂದು ಒತ್ತಿ ಹೇಳಿರುವ ಅವರು, ಸಾರ್ವಜನಿಕ ಸೇವೆಯೇ ತಮ್ಮ ರಾಜಕೀಯ ಜೀವನದ ಮುಖ್ಯ ಧ್ಯೇಯವಾಗಿದೆ ಎಂದಿದ್ದಾರೆ. ಅಧಿಕಾರ ಮತ್ತು ಸ್ಥಾನಮಾನಗಳು ಕೇವಲ ಹೆಚ್ಚುವರಿ ಜವಾಬ್ದಾರಿಗಳಾಗಿದ್ದು, ರಾಜಕಾರಣಿಗೆ ನಿಜವಾದ ಶಕ್ತಿ ಸಿಗುವುದು ಸಾರ್ವಜನಿಕರ ನಂಬಿಕೆ ಮತ್ತು ಬೆಂಬಲದಿಂದಲೇ ಹೊರತು ಕೇವಲ ಹುದ್ದೆಗಳಿಂದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಧಿಕಾರ ಸಿಕ್ಕರೆ ಅದನ್ನು ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಬಳಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಪಕ್ಷವು ತಮಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿರುವ ಮಧ್ವರಾಜ್, ಯಾವುದೇ ಹುದ್ದೆ ಸಿಗದಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡುವುದಾಗಿ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಹಾಗೂ ನಾಯಕತ್ವದ ಮೇಲೆ ತಮಗೆ ಪೂರ್ಣ ಭರವಸೆ ಇದ್ದು, ತಮ್ಮ ಪ್ರಾಮಾಣಿಕತೆ ಮತ್ತು ಜನಸೇವೆಯನ್ನು ಗುರುತಿಸಿ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ಪಕ್ಷ ಕೈಗೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜಕೀಯ ಏಳಿಗೆಗೆ ಕಾರಣರಾದ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಹಾಗೂ ಸಾರ್ವಜನಿಕರ ನಿರಂತರ ಬೆಂಬಲಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು ಹಾಗೂ ವರದಿಗಳನ್ನು ಸಾರ್ವಜನಿಕರು ನಂಬಬಾರದು ಮತ್ತು ಕೇವಲ ಅಧಿಕೃತ ಪ್ರಕಟಣೆಗಳನ್ನು ಮಾತ್ರ ಗಮನಿಸಬೇಕು ಎಂದು ಮನವಿ ಮಾಡಿದ್ದಾರೆ. ಹುದ್ದೆಗಳಿಗಿಂತ ತಮಗೆ ಜನರ ಸೇವೆಯೇ ಪ್ರಮುಖವಾಗಿದ್ದು, ಯಾವುದೇ ಪರಿಸ್ಥಿತಿಯಲ್ಲೂ ಸಾರ್ವಜನಿಕ ಕೆಲಸಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









