ಮಂಗಳೂರು : ಮಕ್ಕಳು ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದೊಂದು ವರ್ಷದಲ್ಲಿ ಜಿಲ್ಲೆಯಲ್ಲಿ 86 ಮಕ್ಕಳು ಕಾಣೆಯಾದ ಬಗ್ಗೆ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪೈಕಿ 79 ಮಕ್ಕಳು ಪತ್ತೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಮಕ್ಕಳು ಕಾಣೆಯಾದ ಪ್ರಕರಣಗಳ ಬಗ್ಗೆ ಒತ್ತು ನೀಡಿ ತ್ವರಿತವಾಗಿ ಮಕ್ಕಳನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾದ ಅನಾಥಾಲಯ, ವಿಶೇಷ ಮಕ್ಕಳ ಸಂಸ್ಥೆಗಳು ನಿರ್ಗತಿಕ ಮಕ್ಕಳ ಸಂಸ್ಥೆಗಳು ಸೇರಿದಂತೆ ಜಿಲ್ಲೆಯಲ್ಲಿ 69 ಮಕ್ಕಳ ಮತ್ತು ಪಾಲನಾ ಸಂಸ್ಥೆಗಳಲ್ಲಿ 2581 ಮಕ್ಕಳು ಕಲಿಯುತ್ತಿದ್ದಾರೆ. ಇಂತಹ ಸಂಸ್ಥೆಗಳಿಗೆ ಆಗ್ಗಿಂದಾಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲಿನ ಕಟ್ಟಡಗಳು ಮಕ್ಕಳ ವಾಸ್ತವ್ಯಕ್ಕೆ ಅನುಕೂಲವಾಗಿ ಉತ್ತಮ ಗಾಳಿ, ಬೆಳಕು ಇರುವ ಬಗ್ಗೆ ಹಾಗೂ ಉತ್ತಮ ಆಹಾರ ನೀಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ಪ್ರತಿ ತಿಂಗಳು ಭೇಟಿ ನೀಡಬೇಕು ಎಂದು ಅವರು ಸೂಚಿಸಿದರು.
ಸಂಕಷ್ಟದಲ್ಲಿರುವ ಮತ್ತು ತೊಂದರೆಗೀಡಾದ ಮಕ್ಕಳಿಗೆ ದಿನದ 24 ಗಂಟೆಗಳ ಕಾಲ ಉಚಿತ ಮತ್ತು ತುರ್ತು ಸೇವೆ ನೀಡುವ ಯೋಜನೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ನಮೂದಿಸಲು ಕ್ರಮಕೈಗೊಳ್ಳಬೇಕು. ಮಕ್ಕಳ ಸಹಾಯವಾಣಿಗೆ ಬರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಒಂದು ವರ್ಷದಲ್ಲಿ ಮಕ್ಕಳ ಸಹಾಯವಾಣಿಗೆ 763 ಪ್ರಕರಣಗಳು ಬಂದಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ಸಭೆಯನ್ನು ನಿರಂತರವಾಗಿ ನಡೆಸಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









