ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಕಾಲೇಜು ಬಸ್ ನಾಟೆಕಲ್ ತಿರುವಿನಲ್ಲಿ ಭೀಕರ ಅಪಘಾತಕ್ಕೆ ಈಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಮಗುಚಿದ್ದು, ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದೇ ವೇಳೆ ಬಸ್ಸಿನ ಅಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ದುರ್ದೈವಿಯನ್ನು ಚಿಕ್ಕಮಗಳೂರು ಮೂಲದ, ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ಪ್ರಜ್ವಲ್ ಅರ್ನಾಲ್ಡ್ (31) ಎಂದು ಗುರುತಿಸಲಾಗಿದೆ. ನಾಟೆಕಲ್ ಸಮೀಪ ಕಾಲೇಜು ಬಸ್ ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಓವರ್ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಬಸ್ ಪಕ್ಕದ ಧರೆಗೆ ಒರಗಿ ನಿಂತಿದ್ದು, ಈ ವೇಳೆ ಬೈಕ್ ಸವಾರ ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಕ್ರೇನ್ ವ್ಯವಸ್ಥೆ ಮಾಡಿ ಬಸ್ಸನ್ನು ಮೇಲಕ್ಕೆತ್ತಿ, ಅದರ ಅಡಿಯಲ್ಲಿ ಸಿಲುಕಿದ್ದ ಸವಾರನನ್ನು ಹೊರತೆಗೆದಿದ್ದಾರೆ. ಬಳಿಕ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಯಿತಾದರೂ, ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಕೆಲಕಾಲ ರಸ್ತೆ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿತ್ತು. ಸದ್ಯ ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










