ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ಸೇರಿ 12ನೇ ತರಗತಿಯವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ದಿನಾಂಕ 03.07.2026ರ ಶುಕ್ರವಾರದಂದು ರಜೆ ಸಾರಲಾಗಿದೆ. ಈ ಆದೇಶವನ್ನು ಮೀರಿ ತರಗತಿಗಳನ್ನು ನಡೆಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.
ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತವು ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಕ್ಕಳು ಯಾವುದೇ ಕಾರಣಕ್ಕೂ ನದಿತೀರ, ಕೆರೆ, ಸಮುದ್ರತೀರ ಹಾಗೂ ತಗ್ಗು ಪ್ರದೇಶಗಳತ್ತ ಹೋಗದಂತೆ ಪೋಷಕರು ನಿಗಾವಹಿಸಬೇಕು ಮತ್ತು ಸಾರ್ವಜನಿಕರು ಹಾಗೂ ಪ್ರವಾಸಿಗರು ಜಲಮೂಲಗಳಿಂದ ದೂರವಿರಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಆದೇಶಿಸಲಾಗಿದೆ. ಪ್ರತಿ ತಾಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಗಿದ್ದು, ಸಾರ್ವಜನಿಕರು ಮಳೆ ಹಾನಿ ಹಾಗೂ ತುರ್ತು ನೆರವಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ಸಂಪರ್ಕಿಸಬಹುದಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










