ಬಂಟ್ವಾಳ : ಒಡಿಶಾದ ಪುರಿ ಜಗನ್ನಾಥ ದೇವರ ವಿಶ್ವಪ್ರಸಿದ್ಧ ರಥಯಾತ್ರೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ತಮ್ಮ ಕ್ಷೇತ್ರದಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಕ್ಷಣವೇ ಸ್ಪಂದಿಸಿದ್ದಾರೆ. ಘಟನೆಯ ಸುಳಿವು ಸಿಗುತ್ತಿದ್ದಂತೆಯೇ ಪುರಿಯಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕರು, ಇಡೀ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಸಾರ್ವಜನಿಕ ನಿಲ್ದಾಣದಲ್ಲಿ ನಡೆದ ಈ ಘೋರ ಅಪರಾಧವನ್ನು ಖಂಡಿಸಿದ ಅವರು, ಆರೋಪಿಯನ್ನು ಯಾವುದೇ ಕಾಲಹರಣ ಮಾಡದೆ ತಕ್ಷಣವೇ ಹೆಡೆಮುರಿ ಕಟ್ಟಿ, ಕಾನೂನಿನ ಎಲ್ಲಾ ಕಠಿಣ ಸೆಕ್ಷನ್ಗಳ ಅಡಿಯಲ್ಲಿ ಅತ್ಯುಗ್ರ ಕ್ರಮ ಜರುಗಿಸಬೇಕೆಂದು ತಾಕೀತು ಮಾಡಿದ್ದಾರೆ.
ಸಂತ್ರಸ್ತ ಯುವತಿಯ ಕುಟುಂಬಕ್ಕೆ ಆದಷ್ಟು ಬೇಗನೆ ನ್ಯಾಯ ಸಿಗುವಂತಾಗಲು ಈ ಪ್ರಕರಣದ ತನಿಖೆಯನ್ನು ಅತ್ಯಂತ ನಿಷ್ಪಕ್ಷಪಾತವಾಗಿ ಹಾಗೂ ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಕಾನೂನು ಪಾಲಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ತನಿಖೆಯ ವೇಳೆ ಯಾವುದೇ ರೀತಿಯ ರಾಜಕೀಯ ಪ್ರಭಾವ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಕೇವಲ ಕಾನೂನಿನ ಚೌಕಟ್ಟಿನಲ್ಲೇ ಪ್ರಾಮಾಣಿಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ. ಕೃತ್ಯ ಎಸಗಿದ ಹಂತಕನಿಗೆ ಪ್ರತ್ಯಕ್ಷವಾಗಿಯಾಗಲಿ ಅಥವಾ ಪರೋಕ್ಷವಾಗಿಯಾಗಲಿ ಬೇರೆ ಯಾರಾದರೂ ಸಾಥ್ ನೀಡಿದ್ದಾರೆಯೇ ಎಂಬ ಕೋನದಲ್ಲೂ ಸಮಗ್ರ ತನಿಖೆಯಾಗಬೇಕು. ಒಂದು ವೇಳೆ ಇತರರ ಸಮ್ಮತಿ ಅಥವಾ ಪಾತ್ರ ಕಂಡುಬಂದಲ್ಲಿ, ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಅವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಶಾಸಕರು ಸೂಚಿಸಿದ್ದಾರೆ.
ಇಂತಹ ರಕ್ತಪಿಪಾಸು ಕೃತ್ಯಗಳು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಮತ್ತೊಮ್ಮೆ ಸಂಭವಿಸದಂತೆ ತಡೆಯಲು ಬಸ್ ನಿಲ್ದಾಣಗಳು ಸೇರಿದಂತೆ ಎಲ್ಲಾ ಪ್ರಮುಖ ಸಾರ್ವಜನಿಕ ವಲಯಗಳಲ್ಲಿ ಪೊಲೀಸ್ ಕಾವಲು ಹಾಗೂ ಗಸ್ತನ್ನು ಇಂದಿನಿಂದಲೇ ಮತ್ತಷ್ಟು ಚುರುಕುಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಹೆಣ್ಣುಮಕ್ಕಳ ಭದ್ರತೆಗೆ ಮೊದಲ ಆದ್ಯತೆ ನೀಡಬೇಕಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಬೇಕು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ವ್ಯವಸ್ಥೆಯನ್ನು ಸದಾ ಸಕ್ರಿಯವಾಗಿಟ್ಟುಕೊಂಡು ನಿರಂತರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ಕ್ಷೇತ್ರದ ನಾಗರಿಕರಲ್ಲಿ ಹಾಗೂ ಮಹಿಳೆಯರಲ್ಲಿ ಸುರಕ್ಷತೆಯ ಮತ್ತು ಧೈರ್ಯದ ಭಾವನೆಯನ್ನು ಮರುಸ್ಥಾಪಿಸಲು ಪೊಲೀಸ್ ಇಲಾಖೆಯು ಅತ್ಯಂತ ಕಟ್ಟುನಿಟ್ಟಿನ ಹಾಗೂ ದಕ್ಷತೆಯ ಕ್ರಮಗಳನ್ನು ಜಾರಿಗೆ ತರಬೇಕು. ಬಂಟ್ವಾಳದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸಮಾಜಘಾತುಕ ಶಕ್ತಿಗಳಿಗೆ ಹಾಗೂ ಅಪರಾಧ ಎಸಗುವ ಮನಸ್ಥಿತಿಯವರಿಗೆ ನಡುಕ ಹುಟ್ಟಿಸುವಂತಹ ಕಠಿಣ ಕಾನೂನು ವಾತಾವರಣವನ್ನು ನಿರ್ಮಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೊಲೀಸ್ ಉನ್ನತಾಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










