ಮಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಾಗರಿಕರಲ್ಲಿ ಪ್ರಜಾಪ್ರಭುತ್ವದ ಹಕ್ಕಿನ ಕುರಿತು ಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೊಂಟ ಮುರಿದು ನಿಂತಿದೆ. ಇದರ ಭಾಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಜಂಟಿ ಆಶ್ರಯದಲ್ಲಿ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್ಎಸ್ಆರ್) ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಶನಿವಾರ ನಗರದಲ್ಲಿ ಒಂದು ಬೃಹತ್ ಬೈಕ್ ರ್ಯಾಲಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಅರ್ಹ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಉತ್ತೇಜಿಸುವ ಈ ವಿಶೇಷ ಜಾಗೃತಿ ಅಭಿಯಾನದ ಬೈಕ್ ರ್ಯಾಲಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್.ವಿ ಅವರು ಅಧಿಕೃತವಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಲಾಲ್ಬಾಗ್ನಲ್ಲಿರುವ ಮಂಗಳೂರು ಮಹಾನಗರಪಾಲಿಕೆಯ ಆವರಣದಿಂದ ಅತ್ಯಂತ ಉತ್ಸಾಹದಿಂದ ಹೊರಟ ಈ ಬೈಕ್ ರ್ಯಾಲಿಯು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಕದ್ರಿ ಉದ್ಯಾನವನದ (ಕದ್ರಿ ಪಾರ್ಕ್) ಬಳಿ ಮುಕ್ತಾಯಗೊಂಡಿತು.
ಸಾರ್ವಜನಿಕ ಗಮನ ಸೆಳೆದ ಈ ಮಹತ್ವದ ಬೈಕ್ ರ್ಯಾಲಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ (ಸಿಇಒ) ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ನೂರಾರು ಸಿಬ್ಬಂದಿಗಳು ಪಾಲ್ಗೊಂಡು ಮತದಾನ ಜಾಗೃತಿಯ ಸಂದೇಶ ಸಾರಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










