ಮಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಪುಣ್ಯಕ್ಷೇತ್ರದ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಅವರು ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ತಿರುಪತಿ ದರ್ಶನ ಪೂರೈಸಿ ಮಂತ್ರಾಲಯದತ್ತ ಕಾರಿನಲ್ಲಿ ಸಾಗುತ್ತಿದ್ದ ವೇಳೆ ರಾತ್ರಿ ಸುಮಾರು 2:30ರ ವೇಳೆಗೆ ಈ ದುರಂತ ಸಂಭವಿಸಿದ್ದು, ಕರಾವಳಿಯ ಉದ್ಯಮ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ಗೆ ಅತಿ ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಢಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗದಲ್ಲಿದ್ದ ಉದ್ಯಮಿ ರವಿ ಶೆಟ್ಟಿ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅಪಘಾತದ ಶಬ್ದ ಕೇಳಿ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂತ್ರಾಲಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










