ಉಡುಪಿ : ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಉಡುಪಿಯ ಬ್ರಹ್ಮಗಿರಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದರು. ರಸ್ತೆಯಿಡೀ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಧರಣಿ ಕುಳಿತ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿದ್ದರಿಂದ ಸ್ಥಳೀಯ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾನಿರತ ಕಾಂಗ್ರೆಸ್ ಮುಖಂಡರು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳು ಮತ್ತು ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ ಎಂದರು. ಅಷ್ಟೇ ಅಲ್ಲದೆ, ಇಡೀ ದೇಶವೇ ಕಾತರದಿಂದ ಎದುರುನೋಡುತ್ತಿರುವ ಇಂತಹ ಗಂಭೀರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರ ಮೌನ ವಹಿಸಿರುವುದನ್ನು ತೀವ್ರವಾಗಿ ಖಂಡಿಸಿದರು.
ಕೇಂದ್ರ ಸರ್ಕಾರವು ತನ್ನ ವಿರುದ್ಧದ ಜನಾಕ್ರೋಶ ಹಾಗೂ ಪ್ರತಿಭಟನೆಗಳನ್ನು ಹತ್ತಿಕ್ಕಲು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ನಾಯಕರು, ತಕ್ಷಣವೇ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಕುರಿತು ಸ್ಪಷ್ಟನೆ ನೀಡಬೇಕು ಹಾಗೂ ಇಂತಹ ದಬ್ಬಾಳಿಕೆಯ ಕ್ರಮಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಕಾವೇರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ತೆರವುಗೊಳಿಸಿದರು. ಈ ಜಂಟಿ ಪ್ರತಿಭಟನಾ ಸಮಾವೇಶದಲ್ಲಿ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಎಂ.ಎ. ಗಫೂರ್, ವೆರೋನಿಕಾ ಕಾರ್ನೆಲಿಯೊ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










