ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 23, 2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ರಜೆ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51(ಬಿ) ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು ಹಾಗೂ ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಮತ್ತು ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಇದರೊಂದಿಗೆ ಮೀನುಗಾರರು ಕಡಲಿಗೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ಭೇಟಿ ನೀಡುವುದನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಂಬಂಧಪಟ್ಟ ಇಲಾಖೆಗಳು ತಾಲೂಕು ಮಟ್ಟದಲ್ಲಿ ಕಾಳಜಿ ಕೇಂದ್ರಗಳನ್ನು (Relief Centers) ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ತಿಳಿಸಲಾಗಿದೆ.
ವಿಪತ್ತು ನಿರ್ವಹಣೆಯ ಭಾಗವಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ಸದಾ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ನೆರವು ಅಥವಾ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಉಚಿತ ಹೆಲ್ಪ್ಲೈನ್ ಸಂಖ್ಯೆ 1077 ಅಥವಾ 0824-2442590 ಗೆ ಸಂಪರ್ಕಿಸಬಹುದಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










