ಮಂಗಳೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಸರ್ಕಾರವು, ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ರೀತಿ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. ಮಂಗ್ಳೂರಿನ ಮಂಗಳ ಗಂಗೋತ್ರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ದೆಹಲಿಯಲ್ಲಿ ಶಾಂತಿಯುತವಾಗಿ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವುದು ಮನಕಲಕುವಂತಿದೆ. ಬ್ರಿಟಿಷರ ಕಾಲದ ಜಲಿಯನ್ವಾಲಾ ಬಾಗ್ ಹತ್ಯಾಕಾಂಡವನ್ನು ನೆನಪಿಸುವಂತೆ ಬಿಜೆಪಿ ಪಡೆಗಳು ವರ್ತಿಸಿವೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ವಿದೇಶಿ ಹಣ ಮತ್ತು ಭಯೋತ್ಪಾದಕರ ನಂಟಿದೆ ಎಂದು ಆರೋಪಿಸುವ ಕೇಂದ್ರ ಸರ್ಕಾರ, ತಮ್ಮ ಗುಪ್ತಚರ ಇಲಾಖೆಗಳು ಕೇವಲ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಮಾತ್ರವೇ ಇವೆಯೇ ಎಂಬುದಕ್ಕೆ ಸ್ಪಷ್ಟನೆ ನೀಡಬೇಕಾಗಿದೆ.
2014 ರಿಂದೀಚೆಗೆ ಎನ್ಟಿಎ ಸ್ಥಾಪನೆಯಾದ ಬಳಿಕ ಬರೋಬ್ಬರಿ 152 ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಈ ಅಕ್ರಮಗಳಿಂದ ಬೇಸತ್ತು 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇವು ಸಾಂಸ್ಥಿಕ ಕೊಲೆಗಳೇ ಆಗಿವೆ. ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರೆ, ಸರ್ಕಾರ ಮಾತ್ರ ದೌರ್ಜನ್ಯ ಎಸಗುತ್ತಿದೆ. ಆದರೆ, ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ದಾಳವಾಗಿ ಬಲಿಯಾಗಬಾರದು ಎಂದು ಅವರು ಇದೇ ವೇಳೆ ಎಚ್ಚರಿಸಿದರು.
ಇನ್ನು ಅಯೋಧ್ಯೆಯ ಶ್ರೀರಾಮ ಮಂದಿರದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿದ ಪದ್ಮರಾಜ್, ದೇಶದ ಪ್ರತಿ ಮನೆಯಿಂದ ಸಂಗ್ರಹಿಸಿದ ದೇಣಿಗೆಗೆ ಸಂಬಂಧಿಸಿದಂತೆ ಕೇವಲ ಎಸ್ಐಟಿ ತನಿಖೆ ಸಾಲದು; ಸಂಪೂರ್ಣ ಆಡಿಟ್ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಪ್ಪಿ, ಟಿ. ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಪ್ರೇಮನಾಥ್ ಮತ್ತು ಸಮರ್ಥ ಭಟ್ ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










