
ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 25 ಶನಿವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮಾ ಸಂಸ್ಥೆಗಳಿಗೆ (ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳು ಸೇರಿದಂತೆ) ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ರಜಾ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ಪ್ರವಾಸಿಗರ ಸುರಕ್ಷತೆಗೆ ಜಿಲ್ಲಾಡಳಿತವು ಹಲವು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪೋಷಕರು ತಮ್ಮ ಮಕ್ಕಳನ್ನು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ನಿಗಾ ವಹಿಸಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರೊಂದಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ತುರ್ತು ವಿಪತ್ತು ನಿರ್ವಹಣೆ ಕಾರ್ಯಗಳನ್ನು ನಿರ್ವಹಿಸಬೇಕು ಮತ್ತು ತಾಲೂಕುವಾರು ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ನೆರವಿಗಾಗಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಸಂಪರ್ಕಿಸಬಹುದು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










