ಉಡುಪಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಜುಲೈ 28 ರಂದು ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕರು, “ಬಾಬರಿ ಮಸೀದಿಯನ್ನು ಕೆಡವಿದಂತೆಯೇ ರಾಹುಲ್ ಗಾಂಧಿಯವರ ರಾಜವಂಶವೂ ನಾಶವಾಗುತ್ತದೆ” ಎಂದಿದ್ದಲ್ಲದೆ, ಅವರು ಮಾದಕ ವಸ್ತುವಿನ ಪ್ರಭಾವದಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಈ ಸಂಬಂಧ ಕಾಂಗ್ರೆಸ್ ನಾಯಕರು ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಉಡುಪಿ ಠಾಣೆಯ ತನಿಖಾಧಿಕಾರಿಗಳು ಜುಲೈ 29 ರಂದು ಶಾಸಕರ ನಿವಾಸಕ್ಕೆ ತೆರಳಿ ನೋಟಿಸ್ ಜಾರಿಗೊಳಿಸಿದ್ದಾರೆ.
ಇನ್ನೊಂದೆಡೆ, ಶಾಸಕರ ಭಾಷಣವನ್ನು ಖಂಡಿಸಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಕಚೇರಿಯತ್ತ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದಾಗ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾಕಾರರನ್ನು ಕಸ್ಟಡಿಗೆ ತೆಗೆದುಕೊಂಡು ಠಾಣೆಗೆ ಕರೆದೊಯ್ದರು. ಇದರ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಬಳಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರಿಂದ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಉದ್ವಿಗ್ನತೆ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಬಂದೋಬಸ್ತ್ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










