ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಳೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 4, 2026 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಆದೇಶದಂತೆ ಮಂಗಳೂರು ಉಪವಿಭಾಗಕ್ಕೆ ಒಳಪಡುವ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ 10ನೇ ತರಗತಿಯವರೆಗಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (ವಸತಿ ಶಾಲೆಗಳು ಸೇರಿದಂತೆ) ರಜೆ ನೀಡಲಾಗಿದೆ. ಹಾಗೆಯೇ, ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ 12ನೇ ತರಗತಿಯವರೆಗಿನ ಎಲ್ಲಾ ಶಾಲಾ-ಕಾಲೇಜುಗಳು, ITI ಹಾಗೂ Diploma ಸಂಸ್ಥೆಗಳಿಗೆ (ವಸತಿ ಶಾಲೆ-ಕಾಲೇಜು ಸೇರಿದಂತೆ) ರಜೆ ಘೋಷಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.
ಮಳೆಯ ತೀವ್ರತೆಯಿಂದಾಗಿ ಸಾರ್ವಜನಿಕರ ಹಾಗೂ ಮಕ್ಕಳ ಸುರಕ್ಷತೆಗಾಗಿ ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ. ಮಕ್ಕಳು ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು. ಇದೇ ವೇಳೆ, ಕಡಲು ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಹಾಗೂ ನದಿತೀರಗಳಿಗೆ ತೆರಳದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಆಯುಕ್ತರು ಸೂಚಿಸಿದ್ದಾರೆ. ಪ್ರಕೃತಿ ವಿಕೋಪದ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಪ್ರತಿಯೊಂದು ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ಸಜ್ಜಾಗಿಡಲಾಗಿದ್ದು, ನೆರವಿಗೆ ಸಾರ್ವಜನಿಕರು ಉಚಿತ ಸಹಾಯವಾಣಿ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದು.
ಕಾಸರಗೋಡಿನಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್: ಆಗಸ್ಟ್ 4 ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ!
ಕಾಸರಗೋಡು ಜಿಲ್ಲೆಯಾದ್ಯಂತ ಪ್ರಸ್ತುತ ಭಾರೀ ಮಳೆ ಮುಂದುವರಿದಿದ್ದು, ಕೇಂದ್ರ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಆಗಸ್ಟ್ 4 ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಣೆ ಮಾಡಿದ್ದಾರೆ.
ಈ ಆದೇಶದಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಅಂಗನವಾಡಿಗಳು, ಪಿಯು ಮತ್ತು ಪದವಿ ಕಾಲೇಜುಗಳು, ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಟ್ಯೂಷನ್ ಸೆಂಟರ್ಗಳು, ಕೇಂದ್ರೀಯ ವಿದ್ಯಾಲಯಗಳು, ಸಿ.ಬಿ.ಎಸ್.ಇ (CBSE) ಹಾಗೂ ಐ.ಸಿ.ಎಸ್.ಇ (ICSE) ಶಾಲೆಗಳಿಗೆ ರಜೆ ಅನ್ವಯಿಸಲಿದೆ. ಇದರ ಜತೆಗೆ ಮದರಸಾಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಲಾಗಿದೆ.
ಆದರೆ, ಪೂರ್ವನಿಗದಿತ ವಿಶ್ವವಿದ್ಯಾಲಯ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಪ್ರಮುಖ ಸಂದರ್ಶನಗಳು ಯಾವುದೇ ಬದಲಾವಣೆ ಇಲ್ಲದೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









