ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ, ಮೈಸೂರಿನ ಕಲ್ಯಾಣಗಿರಿ ನಿವಾಸಿ ಡಾ. ವಹೀದಾ ಸುಲ್ತಾನಾ (70) ಅವರು ಗುರುವಾರ ಅಪರಾಹ್ನ ತೀವ್ರ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಸುಮಾರು ಮೂರು ದಶಕಗಳ ಕಾಲ ಸುದೀರ್ಘ ಬೋಧನಾ ಸೇವೆ ಸಲ್ಲಿಸಿದ್ದ ಅವರು, ಪತಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನೆರವೇರಲಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
ತಮ್ಮ ಶೈಕ್ಷಣಿಕ ವೃತ್ತಿಜೀವನದಲ್ಲಿ ಮಂಗಳೂರು ವಿವಿಯ ಮಹಿಳಾ ಹಾಸ್ಟೆಲ್ ವಾರ್ಡನ್ ಆಗಿ ಹಾಗೂ ಅಲ್ಪಸಂಖ್ಯಾತ ಮತ್ತು ಒಬಿಸಿ ವಿದ್ಯಾರ್ಥಿಗಳ ಐಎಎಸ್-ಕೆಎಎಸ್ ಉಚಿತ ತರಬೇತಿ ಸಂಯೋಜಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಮಾಧ್ಯಮ, ಮಹಿಳಾ ಸಬಲೀಕರಣ, ಆರೋಗ್ಯ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅನೇಕ ಲೇಖನಗಳನ್ನು ಬರೆದಿರುವ ಇವರು, ಕಾರ್ಪೊರೇಟ್ ಕಮ್ಯುನಿಕೇಷನ್ಸ್, ಮಹಿಳೆ ಮತ್ತು ಮೀಡಿಯಾ ಹಾಗೂ ಆರೋಗ್ಯ ಸಂವಹನ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಏಷ್ಯನ್ ಕಾಂಗ್ರೆಸ್ ಫಾರ್ ಮೀಡಿಯಾ ಆಂಡ್ ಕಮ್ಯುನಿಕೇಷನ್ సంస్థೆಯ ರಾಷ್ಟ್ರೀಯ ಸಮಿತಿ ಉಪ ನಿರ್ದೇಶಕಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಬಾಂಗ್ಲಾದೇಶ, ಮಲೇಷ್ಯಾ, ಶ್ರೀಲಂಕಾ ಮತ್ತು ಹಾಂಗ್ಕಾಂಗ್ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನಗಳಲ್ಲಿ ಪಾಲ್ಗೊಂಡು ಪ್ರಬಂಧಗಳನ್ನು ಮಂಡಿಸಿದ್ದ ಡಾ. ವಹೀದಾ ಸುಲ್ತಾನಾ ಅವರು, ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ತಮ್ಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಅವರ ಸಾವು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘ (ಮಾಮ್ – MAAM) ಅವರ ನಿಧನಕ್ಕೆ ಆಳವಾದ ಸಂತಾಪ ಮತ್ತು ಕಂಬನಿ ಮಿಡಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










