ಪುತ್ತೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ, ಡಿಪ್ಲೊಮಾ ಕಾಲೇಜುಗಳು ಮತ್ತು ವಸತಿ ಶಾಲೆ-ಕಾಲೇಜುಗಳಿಗೆ ದಿನಾಂಕ 08.08.2026ರ ಶನಿವಾರದಂದು ರಜೆ ಘೋಷಿಸಿ ಆದೇಶಿಸಿದ್ದಾರೆ. ಈ ರಜೆ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆಗಾಗಿ ಜಿಲ್ಲಾಡಳಿತವು ಹಲವು ಮುನ್ನೆಚ್ಚರಿಕೆ ನಿರ್ದೇಶನಗಳನ್ನು ನೀಡಿದೆ. ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಮತ್ತು ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ಅಪಾಯಕಾರಿ ಜಲಮೂಲಗಳಿಂದ ದೂರವಿರಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು, ಪ್ರಕೃತಿ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿರಬೇಕು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆದಿಡಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ಸಂಪರ್ಕಿಸಲು ಕೋರಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










