ಉಡುಪಿ : ಶಿರ್ವಾ ಸಮೀಪದ ಮುದರಂಗಡಿಯ ಪ್ರಖ್ಯಾತ ಉದ್ಯಮಿ ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಭೀಕರವಾಗಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ಘಟನೆ ಮುದರಂಗಡಿ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಏಕಾಏಕಿ ಡೇವಿಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅರ್ಥ್ಮೂವರ್ಸ್ ಸೇರಿದಂತೆ ಹಲವು ಯಶಸ್ವಿ ಉದ್ಯಮಗಳನ್ನು ನಡೆಸುತ್ತಿದ್ದ ಡೇವಿಡ್ ಡಿ’ಸೋಜಾ ಅವರು ಸ್ಥಳೀಯವಾಗಿ ಅಪಾರ ಜನಪ್ರಿಯತೆ ಹೊಂದಿದ್ದರು. ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಶಿರ್ವಾ ಮತ್ತು ಪಡುಬಿದ್ರೆ ಪೊಲೀಸ್ ಠಾಣೆಯ ಉನ್ನತಾಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯ ತಂಡ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










