ಪುತ್ತೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಂತರ್ ರಾಜ್ಯ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ (24) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ ರೋಚಕ ವಿಷಯ ಬೆಳಕಿಗೆ ಬಂದಿದೆ. ಪುತ್ತೂರಿನಲ್ಲಿ ಕಾರನ್ನು ಕಳವು ಮಾಡಿದ್ದ ಆರೋಪಿಗಳು, ಅದನ್ನು ಕೇರಳ ಮಾರ್ಗವಾಗಿ ತಮಿಳುನಾಡಿಗೆ ಸಾಗಿಸಿ ಮಾರಾಟ ಮಾಡಿದ್ದರು. ಅಲ್ಲದೆ, ಪೊಲೀಸರ ಕಣ್ಣಿಗೆ ಬೀಳದಂತೆ ತಮಿಳುನಾಡಿನಲ್ಲಿ ಆ ಕಾರನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಕೇರಳದ ಬದಿಯಡ್ಕ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿಯೂ ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









