ಮಂಗಳೂರು : ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠವನ್ನು ಸ್ಥಾಪಿಸುವ ಕುರಿತು ಪರಿಶೀಲಿಸಲು ಶೀಘ್ರದಲ್ಲೇ ಪರಿಶೀಲನಾ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರು ಭರವಸೆ ನೀಡಿದ್ದಾರೆ ಎಂದು ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತಿಳಿಸಿದ್ದಾರೆ. ಈ ಪೀಠದ ಸ್ಥಾಪನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಅಡೆತಡೆಗಳ ಕುರಿತು ಚರ್ಚಿಸಲು ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಸುದೀರ್ಘ ವಿಚಾರ ವಿನಿಮಯ ನಡೆಸಿತು. ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೋನಾಲ್ಡ್ ಪ್ರವೀಣ್, ಮಾಜಿ ಅಧ್ಯಕ್ಷ ರಾಘವೇಂದ್ರ ರಾವ್ ಹಾಗೂ ಹೈಕೋರ್ಟ್ ಪೀಠ ಸಮಿತಿ ಪಿಆರ್ಒ ಎಂ. ಪಿ. ನೊರೋನ್ಹಾ ಸೇರಿದಂತೆ ಪ್ರಮುಖ ವಕೀಲರು ಉಪಸ್ಥಿತರಿದ್ದರು.
ಈ ವೇಳೆ ಕರಾವಳಿ ಭಾಗಕ್ಕೆ ಸಂಚಾರಿ ಪೀಠದ ಅಗತ್ಯತೆಯನ್ನು ಒಪ್ಪಿಕೊಂಡ ಮುಖ್ಯ ನ್ಯಾಯಮೂರ್ತಿಗಳು, ಸಮಿತಿ ಮೂಲಕ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಿ ಮುಂದಿನ ಹಂತದ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಆರಂಭಿಸಬೇಕೆಂಬ ಬೇಡಿಕೆಗೆ ಕರಾವಳಿಯ ವಿವಿಧ ಬಾರ್ ಅಸೋಸಿಯೇಷನ್ಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಸ್ಥಾಪನೆಗೆ ಅಗತ್ಯವಿರುವ ಸಂಪೂರ್ಣ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದೆ. ಶೀಘ್ರದಲ್ಲೇ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲೂ ಈ ವಿಷಯ ಪ್ರಮುಖವಾಗಿ ಚರ್ಚೆಯಾಗಲಿದೆ. ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ನಿಯೋಗದೊಂದಿಗೆ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿರುವುದು ಕರಾವಳಿ ಜನರ ಬಹುದಿನಗಳ ಕನಸು ನನಸಾಗುವ ನಿಟ್ಟಿನಲ್ಲಿ ಪ್ರಮುಖ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಐವನ್ ಡಿ’ಸೋಜಾ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









