ಬಂಟ್ವಾಳ : ಬಿ.ಸಿ.ರೋಡಿನ ಪ್ರಮುಖ ಕೇಂದ್ರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಉದ್ಘಾಟನೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಾರಾಯಣಗುರುಗಳ 172 ನೇ ಜನ್ಮದಿನಾಚರಣೆಯ ಪ್ರಯುಕ್ತ ಗುರುಪೂಜೋತ್ಸವ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಭಾನುವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನೂತನ ವೃತ್ತವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ತರುವಾಯ ಗಾಣದಪಡ್ಡುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸಿ ಮಾತನಾಡಿ, ವೈಚಾರಿಕ ಹಾಗೂ ಮೌನ ಕ್ರಾಂತಿಯ ಮೂಲಕ ಇಡೀ ಸಮಾಜಕ್ಕೆ ನವಬೆಳಕು ನೀಡಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ, ಸಿದ್ಧಾಂತ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ನಾರಾಯಣ ಗುರುಗಳು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದ ಸಾರ್ವಕಾಲಿಕ ದಾರ್ಶನಿಕರಾಗಿದ್ದು, ಶೋಷಿತ ಹಾಗೂ ಹಿಂದುಳಿದ ವರ್ಗಗಳ ಜನರ ಸಶಕ್ತೀಕರಣ ಮತ್ತು ಸ್ವಾಭಿಮಾನದ ಬದುಕಿಗಾಗಿ ಶ್ರಮಿಸಿದ ಪೂಜನೀಯ ವ್ಯಕ್ತಿತ್ವ ಹೊಂದಿದವರು. ಗಾಂಧೀಜಿ ಹಾಗೂ ಪೋಪ್ ಸೇರಿದಂತೆ ಜಾಗತಿಕ ಮಟ್ಟದ ಅನೇಕ ಗಣ್ಯರು ಅವರ ಮಹತ್ಕಾರ್ಯಗಳನ್ನು ಕೊಂಡಾಡಿದ್ದಾರೆ ಎಂದು ಸ್ಮರಿಸಿದರು. ಮುಂದುವರಿದು ಮಾತನಾಡಿದ ಅವರು, ಹತ್ತಾರು ಹೆಸರುಗಳ ಒತ್ತಡವಿದ್ದರೂ ಈ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನೇ ಅಂತಿಮಗೊಳಿಸಲಾಗಿದೆ. ಹಿಂದೆ ಸಜೀಪಮೂಡದಲ್ಲಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯ ಫಲವಾಗಿ ಇಂದು ಸರ್ಕಾರಿ ಮಟ್ಟದಲ್ಲಿ ಗುರು ಜಯಂತಿ ಆಚರಣೆ ನಡೆಯುತ್ತಿದೆ. ಹಾಗೆಯೇ ನಾವೂರಿನಲ್ಲಿ ಶಿವಗಿರಿ ಮಠದ ಶಾಖೆ ಸ್ಥಾಪನೆಗಾಗಿ 5 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದರು. ಅಲ್ಲದೆ, ಜನರಲ್ಲಿ ಯಾವುದೇ ಭೇದಭಾವ ಮಾಡದೆ ತಾವೂ ಮತ್ತು ಜನಾರ್ದನ ಪೂಜಾರಿಯವರು ಸಾಮಾಜಿಕ ಸೇವೆ ಸಲ್ಲಿಸುತ್ತ ಬಂದಿದ್ದರೂ ಕೆಲವೊಮ್ಮೆ ಅಪಪ್ರಚಾರಗಳಿಗೆ ಗುರಿಯಾಗಬೇಕಾಯಿತು ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು.
ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಹಾಗೂ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು. ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಸುನೀಲ್ ಎಸ್. ಕುಂದರ್ ಮೊಡಂಕಾಪು, ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ, ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಹಾಗೂ ಯುವವಾಹಿನಿ ಅಧ್ಯಕ್ಷ ಕಿರಣ್ ಪೂಂಜರಕೋಡಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಜಕ್ರಿಬೆಟ್ಟು ಅಭ್ಯಾಗತರನ್ನು ಸ್ವಾಗತಿಸಿದರು. ಪ್ರೇಮನಾಥ ಕರ್ಕೇರ ಅವರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿಯ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಇಡೀ ಕಾರ್ಯಕ್ರಮವನ್ನು ನಿರೂಪಿಸಿದರು.
ಇದೇ ಸುಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಜೊತೆಗೆ ವೃತ್ತದ ಸುಂದರ ವಿನ್ಯಾಸ ರೂಪಿಸಿದ ಸುಜಯ್ ಲೋಬೋ ಹಾಗೂ ನಿರ್ಮಾಣ ಗುತ್ತಿಗೆದಾರ ದೀಕ್ಷಿತ್ ಅವರನ್ನು ಗೌರವಿಸಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ಭಜನೆ, ಗುರುಪೂಜೆ ಹಾಗೂ ಮಹಾಪೂಜೆ ನೆರವೇರಿದವು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ‘ದೇಯಿ ಬೈದೇತಿ’ ಚಲನಚಿತ್ರದ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









