ಮಂಗಳೂರು : ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ, 5 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳು ದೋಷಿಗಳು ಎಂದು ಮಂಗಳೂರಿನ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಸೆಪ್ಟೆಂಬರ್ 16ರಂದು ಪ್ರಕಟಿಸಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
2017ರ ಸೆಪ್ಟೆಂಬರ್ 11ರಂದು ಮಂಗಳೂರು ಜೈಲಿನ ಹೊಸ ಕಟ್ಟಡದ ‘ಬಿ’ ಬ್ಲಾಕ್ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾ ಕೈದಿಗಳಾದ ನವನೀತ ಶೆಟ್ಟಿ ಹಾಗೂ ನಿರಂಜನ್ ಭಟ್ ತಮ್ಮ ಪ್ರಕರಣದ ವಿಚಾರಣೆ ದಿನಾಂಕ ತಿಳಿಯಲು ಜೈಲರ್ ಕಚೇರಿಯತ್ತ ತೆರಳುತ್ತಿದ್ದರು. ಈ ಸಂದರ್ಭ ಹಣ ಸುಲಿಗೆಯ ದುರುದ್ದೇಶದಿಂದ ಸಂಚು ರೂಪಿಸಿದ್ದ ಜೈಲಿನಲ್ಲಿದ್ದ ಕೈದಿಗಳ ಗ್ಯಾಂಗ್ ಕ್ಯಾರಂ ಬೋರ್ಡ್, ಸ್ಟೀಲ್ ಡ್ರಮ್ ಹಾಗೂ ಪೈಪ್ಗಳಿಂದ ಇವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿತ್ತು.
ದಾಳಿಕೋರರು ನವನೀತ ಶೆಟ್ಟಿ ಮತ್ತು ನಿರಂಜನ್ ಭಟ್ಗೆ ಕೈ-ಕಾಲುಗಳಿಂದ ತುಳಿದು, ಪೈಪ್ನಿಂದ ತಲೆ ಹಾಗೂ ಬೆನ್ನಿನ ಭಾಗಕ್ಕೆ ಹೊಡೆದು ತೀವ್ರ ಗಾಯಗೊಳಿಸಿದ್ದರು. ಈ ವೇಳೆ ಹಲ್ಲೆ ತಡೆಯಲು ಬಂದ ಜೈಲು ಭದ್ರತಾ ಸಿಬ್ಬಂದಿಯ ಸಮವಸ್ತ್ರ ಹಿಡಿದು ಎಳೆದಾಡಿ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದರು. ಅಲ್ಲದೆ, ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪವನ್ನು ಒಪ್ಪಿಕೊಳ್ಳಬೇಕು ಅಥವಾ 5 ಲಕ್ಷ ರೂಪಾಯಿ ಹಣ ತಂದುಕೊಡಬೇಕು, ಇಲ್ಲವಾದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದರು.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 120(ಬಿ), 143, 147, 148, 341, 323, 324, 384, 506, 307, 353 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ 14 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಎತ್ತಿಹಿಡಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









