ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಎತ್ತಿಹಿಡಿಯುವ ಪ್ರಸಿದ್ಧ ದೇವಾಲಯಗಳು ಮತ್ತು ಮಠಗಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸಚಿವ ಸಂಪುಟವು ವಿಶೇಷ ಅನುದಾನ ಮಂಜೂರು ಮಾಡಿದೆ. ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಒಟ್ಟು ಎಂಟು ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಹಂಚಿಕೆ ಮಾಡಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಪೈಕಿ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅತಿ ಹೆಚ್ಚು 5 ಕೋಟಿ ರೂ. ಅನುದಾನವನ್ನು ಕಾಯ್ದಿರಿಸಲಾಗಿದೆ. ಉಳಿದಂತೆ, ಬಂಟ್ವಾಳ ತಾಲೂಕಿನ ಒಡಿಯೂರು ಮಠ, ಶ್ರೀ ಧಾಮ ಮಾಣಿಲ ಮಠ ಹಾಗೂ ಮಾಣಿಲ ಗ್ರಾಮದ ಕುಕ್ಕಾಜೆ ಕಾಳಿಕಾಂಬ ಆಂಜನೇಯ ಸ್ವಾಮಿ ಕ್ಷೇತ್ರಗಳಿಗೆ ತಲಾ 1 ಕೋಟಿ ರೂಪಾಯಿ ಮಂಜೂರಾಗಿದೆ.
ಅಲ್ಲದೆ, ಪುತ್ತೂರು ವಿಧಾನಸಭಾ ಕ್ಷೇತ್ರದ ಕನ್ಯಾ ಗ್ರಾಮದ ಕಾಣಿಯೂರು ಚಾಮುಂಡೇಶ್ವರಿ ಕ್ಷೇತ್ರ, ಉಳ್ಳಾಲದ ಕೊಂಡನದ ಪಿಳ್ಳಿ ಚಾಮುಂಡಿ ದೈವಸ್ಥಾನ, ಧರ್ಮಸ್ಥಳ ಸಮೀಪದ ಕನ್ಯಾಡಿಯ ಶ್ರೀ ರಾಮ ಕ್ಷೇತ್ರ ಹಾಗೂ ಕೇಮಾರು ಮಠದ ಶ್ರೀ ಸಾಂದೀಪನಿ ಸಾಧನಾಶ್ರಮಗಳಿಗೆ ತಲಾ 1 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಈ ಅನುದಾನದಿಂದ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಮೂಲಸೌಕರ್ಯ ಹಾಗೂ ಸಮಗ್ರ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯಲಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









