ಮಂಗಳೂರು : ಮಂಗಳೂರಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತೈಲ ಸಂಸ್ಕರಣಾ ಘಟಕದ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಭಾರಿ ಸ್ಫೋಟದೊಂದಿಗೆ ಬೆಂಕಿ ಕಾಣಿಸಿಕೊಂಡು ಭಾರೀ ಆತಂಕ ಸೃಷ್ಟಿಸಿದೆ. ಎಂಆರ್ಪಿಎಲ್ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕವಾದ ಸಿಎಚ್ಟಿಯು ಭಾಗದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ಸ್ಫೋಟ ಸಂಭವಿಸಿದ ಮೂರನೇ ಘಟಕದಲ್ಲಿ ಸ್ಥಳೀಯ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸುತ್ತಮುತ್ತಲಿನ ಜೋಕಟ್ಟೆ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ಕಳವಾರು ಮತ್ತು ಚರ್ಚಿಗುಡ್ಡೆ ಪ್ರದೇಶದ ಹಲವು ಮನೆಗಳು ತೀವ್ರವಾಗಿ ಕಂಪಿಸಿವೆ. ಹತ್ತಕ್ಕೂ ಹೆಚ್ಚು ಮನೆಗಳ ಕಿಟಕಿ ಗಾಜುಗಳು ಸಂಪೂರ್ಣವಾಗಿ ಒಡೆದು ಪುಡಿಯಾಗಿದ್ದು, ಬಾಗಿಲುಗಳು ಉದುರಿ ಬಿದ್ದಿವೆ. ಕೆಲವು ಮನೆಗಳ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಸ್ಫೋಟದ ಬೆನ್ನಲ್ಲೇ ಆಕಾಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಬಹುದೂರದವರೆಗೂ ಕಪ್ಪು ಹೊಗೆಯ ಮೋಡ ಗೋಚರಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತುರ್ತು ಸೇವಾ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣೆ ಮತ್ತು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಭದ್ರತೆಯ ಹಿತದೃಷ್ಟಿಯಿಂದ ರಸ್ತೆ ತಡೆದು ಪರಿಶೀಲನೆ ನಡೆಸುತ್ತಿದ್ದ ಪೊಲೀಸರು, ಸಾರ್ವಜನಿಕರಿಗೆ ರಸ್ತೆ ಬ್ಲಾಕ್ ಮಾಡದೆ ಸಹಕಾರ ನೀಡುವಂತೆ ಮನವಿ ಮಾಡಿದರು. ದುರಂತದ ನಿಖರ ಕಾರಣ ತಿಳಿಯಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









