ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಫ್ಲೈಓವರ್ ಮೇಲೆ ಬುಧವಾರ ಮುಂಜಾನೆ ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ತಡೆದು ಹಿಡಿದಿದ್ದಾರೆ. ಮಾಣಿ ಭಾಗದಿಂದ ಮಂಗಳೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಈ ಲಾರಿಯನ್ನು ಫ್ಲೈಓವರ್ ಮೇಲೆಯೇ ತಡೆದು ಪರಿಶೀಲಿಸಿದಾಗ, ವಾಹನದೊಳಗೆ ಅಮಾನವೀಯವಾಗಿ ತುರುಕಲಾಗಿದ್ದ ಆರಕ್ಕೂ ಹೆಚ್ಚು ದನಗಳು ಪತ್ತೆಯಾಗಿವೆ. ತಕ್ಷಣವೇ ಕಾರ್ಯಕರ್ತರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕ್ಷಿಪ್ರವಾಗಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರ ವಾಹನ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮೂವರು ಆರೋಪಿಗಳು ವಾಹನವನ್ನು ರಸ್ತೆಯಲ್ಲೇ ಬಿಟ್ಟು ಕತ್ತಲಿನಲ್ಲಿ ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಲಾರಿಯಲ್ಲಿದ್ದ ಎಲ್ಲಾ ದನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದು, ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ದನಗಳನ್ನು ಎಲ್ಲಿಂದ ತರಲಾಗುತ್ತಿತ್ತು ಮತ್ತು ಯಾವ ಸ್ಥಳಕ್ಕೆ ಸಾಗಿಸಲಾಗುತ್ತಿತ್ತು ಎಂಬ ಕುರಿತು ಇನ್ನು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪರಾರಿಯಾದ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಈ ಅಕ್ರಮ ಗೋ ಸಾಗಾಟ ಜಾಲದ ಹಿನ್ನೆಲೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ಕೈಗೊಳ್ಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









