ಮಂಗಳೂರು : ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಅನಿಲ ಸ್ಫೋಟದ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕರೊಬ್ಬರು ಶನಿವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾದ ರಾಜೇಶ್ ಡಿಸಿಲ್ವ ಮೃತಪಟ್ಟ ದುರ್ದೈವಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳಲ್ಲಿ ಒಬ್ಬರಾಗಿದ್ದರು. ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಇವರು ಅವಿವಾಹಿತರಾಗಿದ್ದರು. ಕಳೆದ ಸೆಪ್ಟೆಂಬರ್ 30ರಂದು ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಾಜೇಶ್ ಡಿಸಿಲ್ವ ಅವರು ಗಂಭೀರ ಸುಟ್ಟಗಾಯಗಳಿಗೆ ಒಳಗಾಗಿದ್ದರು.
ಅಪಘಾತದ ಬಳಿಕ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ದಾಖಲಿಸಿ ತಜ್ಞ ವೈದ್ಯರಿಂದ ನಿರಂತರ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರ ಮೃತದೇಹವನ್ನು ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









