ಉಡುಪಿ : ಜಿಲ್ಲೆಯ ಕೋಟ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಹಿರಿಯ ಮುಖಂಡರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮಣೂರು ನಿವಾಸಿ ಗುರುದಾಸ್ ಶೆಣೈ (65) ದುರ್ಮರಣಕ್ಕೀಡಾದ ದುರದೃಷ್ಟಕರ ವ್ಯಕ್ತಿಯಾಗಿದ್ದಾರೆ.
ಅಕ್ಟೋಬರ್ 26ರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುದಾಸ್ ಶೆಣೈ ಅವರು ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದ ಕಡೆಗೆ ಅತಿ ವೇಗವಾಗಿ ಧಾವಿಸಿ ಬಂದ ಕಾರು ರಭಸದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸೈಕಲ್ನಲ್ಲಿದ್ದ ಶೆಣೈ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಕೊನೆಯುಸಿರೆಳೆದರು.
ಅಪಘಾತವೆಸಗಿದ ಕಾರು ಬಳಿಕ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಅಪ್ಪಳಿಸಿದ್ದು, ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳು ಚಾಲಕನನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದ ಕೋಟ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









