ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 15, 16, 18 ಮತ್ತು 23ರ ವ್ಯಾಪ್ತಿಗೆ ಒಳಪಡುವ ಮಾಲಾಡಿ ಕೋರ್ಟ್, ವೆಟ್ ವೆಲ್, ಗೊಲ್ಲರಬೆಟ್ಟು, ಪೊದಾರ್ ಶಾಲೆ ಹಾಗೂ ಎಂ.ವಿ. ಶೆಟ್ಟಿ ಕಾಲೇಜು ಪರಿಸರದಲ್ಲಿ ತಲೆದೋರಿರುವ ಒಳಚರಂಡಿ ಸೋರಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಖ್ಯ ಒಳಚರಂಡಿ ಮಾರ್ಗದ ಸೋರಿಕೆ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯಿಂದಾಗಿ ಈ ಭಾಗದ ಸಾರ್ವಜನಿಕರು ನಿತ್ಯ ಅನುಭವಿಸುತ್ತಿರುವ ನರಕಯಾತನೆಯನ್ನು ಶಾಸಕರು ಖುದ್ದಾಗಿ ವೀಕ್ಷಿಸಿದರು. ತಕ್ಷಣವೇ ಈ ಸಮಸ್ಯೆಯನ್ನು ಬಗೆಹರಿಸಲು ಕೈಗೊಳ್ಳಬೇಕಾದ ತಾಂತ್ರಿಕ ಮತ್ತು ತುರ್ತು ಕ್ರಮಗಳ ಕುರಿತು ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್ಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಗಂಭೀರ ಸಮಸ್ಯೆಯ ಕುರಿತು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ ಎಂದು ತಿಳಿಸಿದ ಶಾಸಕರು, ನಗರಾಭಿವೃದ್ಧಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು. ತುರ್ತು ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಗತ್ಯವಿರುವ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಭರವಸೆ ನೀಡಿದರು.
ಕ್ಷೇತ್ರದ ನಾಗರಿಕರ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡುವುದು ತಮ್ಮ ಮುಖ್ಯ ಬದ್ಧತೆಯಾಗಿದೆ ಎಂದ ಡಾ. ಭರತ್ ಶೆಟ್ಟಿ, ಮಂಗಳೂರು ಉತ್ತರ ಕ್ಷೇತ್ರದ ಇತರ ಯಾವುದೇ ಭಾಗಗಳಲ್ಲಿ ಇಂತಹ ಒಳಚರಂಡಿ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳನ್ನು ತಕ್ಷಣವೇ ಗುರುತಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಸ್ಥಳ ಪರಿಶೀಲನೆಯ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು, ಇಂಜಿನಿಯರ್ಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ನಿಕಟಪೂರ್ವ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ನಾಗರಿಕರು ಹಾಜರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









