ಮಂಗಳೂರು : ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸುವ ಮೂಲಕ ಲಕ್ಷಾಂತರ ರೂಪಾಯಿ ನಗದು ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
ಮಂಗಳೂರು ಶಕ್ತಿನಗರ ನಿವಾಸಿ ಪ್ರವಿತ್ ಶೆಟ್ಟಿ (ಪ್ರವಿತ್ ರಾಜ್ ಶೆಟ್ಟಿ), ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಮತ್ತು ಉಳ್ಳಾಲ ಹರೇಕಳದ ಶಾಕೀರ್ ಬಂಧನಕ್ಕೊಳಗಾದ ವ್ಯಕ್ತಿಗಳಾಗಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಯ್ಯದಿ ಎಂಬವರು ಆಗಸ್ಟ್ 20ರಂದು ವಿವಿಧ ಅಂಗಡಿಗಳಿಂದ ಸಂಸ್ಥೆಯ ವ್ಯವಹಾರದ ಹಣವನ್ನು ವಸೂಲಿ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದರು. ಈ ಸಂದರ್ಭ ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬ ಪ್ರದೇಶದಲ್ಲಿ ಎರಡು ಬೈಕ್ಗಳಲ್ಲಿ ಎದುರಾದ ನಾಲ್ವರು ದುಷ್ಕರ್ಮಿಗಳು ತಲವಾರು ಝಳಪಿಸಿ ಬೆದರಿಸಿದ್ದು, ಅವರಲ್ಲಿದ್ದ 8,35,000 ರೂಪಾಯಿ ನಗದನ್ನು ಕಸಿದುಕೊಂಡು ಪರಾರಿಯಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನುಹತ್ತಿದ ತನಿಖಾ ತಂಡವು ನವೆಂಬರ್ 11ರಂದು ಈ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಸಫಲವಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು, ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ದರೋಡೆ ಮಾಡಿದ್ದ ಹಣದ ಪೈಕಿ 2,01,000 ರೂಪಾಯಿ ನಗದನ್ನು ಜಪ್ತಿ ಮಾಡಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









