ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪದೇ ಪದೇ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಅಪಘಾತ ವಲಯಗಳಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬುಧವಾರ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಗಳು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ಇಂತಹ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ತಕ್ಷಣವೇ ವೇಗ ನಿಯಂತ್ರಕಗಳು, ಟ್ರಾಫಿಕ್ ಸಿಗ್ನಲ್ಗಳು ಹಾಗೂ ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕೇವಲ ತಾತ್ಕಾಲಿಕ ಪರಿಹಾರಗಳಿಗೆ ಸೀಮಿತವಾಗದೆ, ಭವಿಷ್ಯದ ಸುರಕ್ಷತೆಯ ದೃಷ್ಟಿಯಿಂದ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳುವಂತೆ ಎಸ್.ಪಿ ಸೂಚಿಸಿದರು.
ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳ ಹಲವು ಭಾಗಗಳಲ್ಲಿ ಬೀದಿ ದೀಪಗಳ ಕೊರತೆಯಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 42 ಪ್ರಮುಖ ಅಪಘಾತ ವಲಯಗಳನ್ನು (ಬ್ಲ್ಯಾಕ್ ಸ್ಪಾಟ್) ಈಗಾಗಲೇ ಗುರುತಿಸಲಾಗಿದ್ದು, ಆ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ವಿವರಿಸಿದರು.
2025-26ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸ್ ಮತ್ತು ಆರ್ಟಿಒ ಇಲಾಖೆಗಳು ತೀವ್ರ ಕಾರ್ಯಾಚರಣೆ ನಡೆಸಿವೆ. ಈ ಅವಧಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 2,604 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಾಹನಗಳಿಗೆ ನಿಯಮಬಾಹಿರವಾಗಿ ಟಿಂಟೆಡ್ ಗ್ಲಾಸ್ (ಕಪ್ಪು ಗಾಜು) ಅಳವಡಿಸಿದ್ದ ಒಟ್ಟು 33,703 ವಾಹನಗಳ ಮೇಲೆ ಕೇಸು ದಾಖಲಿಸಿ, 2025ರಲ್ಲಿ 73.89 ಲಕ್ಷ ರೂ. ಹಾಗೂ 2026ರಲ್ಲಿ 75.88 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಇದೇ ರೀತಿ, ಕರ್ಕಶ ಹಾರ್ನ್ ಬಳಸುತ್ತಿದ್ದ 2,805 ವಾಹನಗಳ ವಿರುದ್ಧ ಕ್ರಮ ಕೈಗೊಂಡು 2025ರಲ್ಲಿ 7.44 ಲಕ್ಷ ರೂ. ಮತ್ತು 2026ರಲ್ಲಿ 8.38 ಲಕ್ಷ ರೂ. ದಂಡ ವಿಧಿಸಲಾಗಿದೆ.
ಶಾಲಾ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿದ್ದ 974 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೆ, ರಸ್ತೆಯಲ್ಲಿ ತ್ಯಾಜ್ಯ ನೀರು ಚೆಲ್ಲುತ್ತಾ ಸಂಚರಿಸುವ ಮೀನು ಸಾಗಾಟದ ವಾಹನಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2026ರಲ್ಲಿ 535 ಪ್ರಕರಣ ದಾಖಲಿಸಿ 2.65 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ವಿರುದ್ಧದ ಈ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿಗೊಳಿಸುವಂತೆ ಎಸ್.ಪಿ ಸೂಚಿಸಿದರು.
ಭೀಕರ ರಸ್ತೆ ಅಪಘಾತಗಳನ್ನು ನಡೆಸಿ ಸಾವು-ನೋವುಗಳಿಗೆ ಕಾರಣವಾದ 279 ಪ್ರಕರಣಗಳಿಗೆ ಸಂಬಂಧಿಸಿದಂತೆ, ಒಟ್ಟು 538 ಚಾಲಕರ ಚಾಲನಾ ಪರವಾನಗಿಯನ್ನು (ಡ್ರೈವಿಂಗ್ ಲೈಸೆನ್ಸ್) ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಈ ಮಹತ್ವದ ಸಭೆಯಲ್ಲಿ ಡಿಸಿಪಿ ರವಿಶಂಕರ್, ಎಸಿಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್, ಆರ್ಟಿಒ ಅಧಿಕಾರಿ ಮುರಗೇಂದ್ರ ಬಿ. ಶಿರೋಳ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









