ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬುಧವಾರ ನಸುಕಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಸಮೀಪ ಈ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸುಳ್ಯದ ಆಲೆಟ್ಟಿ ನಿವಾಸಿಗಳಾದ ಹಾಶಿರ್ ಎ. (28) ಹಾಗೂ ಸಂಶುದ್ದೀನ್ ಎಸ್.ಎಂ. (25) ಎಂದು ಗುರುತಿಸಲಾಗಿದೆ.
ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕದ್ದು ಸಾಗಿಸಲು ಪ್ರಯತ್ನಿಸುತ್ತಿರುವ ಕುರಿತು ಸುಳ್ಯ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ-ನಿರೀಕ್ಷಕರಾದ ಉದಯ ರವಿ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಅವರು ತಮ್ಮ ಸಿಬ್ಬಂದಿಯೊಂದಿಗೆ ತಕ್ಷಣವೇ ಘಟನಾ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪಿದಾಗ, ಇಬ್ಬರು ವ್ಯಕ್ತಿಗಳು ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ, ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಲು ಯತ್ನಿಸುತ್ತಿದ್ದುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ರಕ್ಷಿಸಲಾದ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026 ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 303(2), 62 ಹಾಗೂ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









