ಮಂಗಳೂರು: ನಗರದ ಮಂಗಳ ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬುಧವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಅಧಿಕಾರಿಗಳೊಂದಿಗೆ ಕ್ರೀಡಾಂಗಣದ ಉನ್ನತೀಕರಣದ ಕುರಿತು ಸ್ಥಳದಲ್ಲೇ ಮಹತ್ವದ ಚರ್ಚೆ ನಡೆಸಿದರು.
ಈ ಪರಿಶೀಲನೆ ಹಾಗೂ ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೇಜಸ್ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಬೇಕಾದ ಅತ್ಯಾಧುನಿಕ ಮೂಲಸೌಕರ್ಯಗಳು ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಯಿತು.
ಕಳೆದ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದಿದ್ದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಮಂಗಳ ಕ್ರೀಡಾಂಗಣವನ್ನು 20 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವನ್ನಾಗಿ ಮೇಲ್ದರ್ಜೆಗೇರಿಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಈ ಭೇಟಿ ಮತ್ತು ಚರ್ಚೆ ನಡೆದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









