ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಮಂಗಳೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಮಂದಿ ಮಧ್ಯಾಹ್ನ ಬಿಸಿಯೂಟ ಯೋಜನೆಯ ಸಿಬ್ಬಂದಿಗಳನ್ನು ಸನ್ಮಾನಿಸಿ ಉಡುಗೊರೆ ನೀಡುವ ಅರ್ಥಪೂರ್ಣ ಸಮಾರಂಭವು ಗುರುವಾರ (ನ.19) ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಜರುಗಿತು. ಜಿಲ್ಲೆಯ ಮುಂಚೂಣಿಯ ಸಹಕಾರಿ ಸಂಸ್ಥೆಯಾದ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಜಿತಕಾಮಾನಂದ ಸ್ವಾಮಿಗಳು, ಶ್ರೀಶಾ ಸೌಹಾರ್ದ ಸೊಸೈಟಿಯು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಜನಪರ ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಅಧ್ಯಕ್ಷ ಗುರುರಾಜ್, ಪ್ರತಿದಿನ ಶಾಲಾ ಮಕ್ಕಳಿಗೆ ಶುಚಿ-ರುಚಿಯಾದ ಬಿಸಿಯೂಟ ತಯಾರಿಸಿ ಬಡಿಸುವ ಈ ತಾಯಂದಿರಿಗೆ ಸರಕಾರದಿಂದ ಲಭಿಸುವ ಗೌರವಧನ ಅತ್ಯಲ್ಪವಾಗಿದೆ. ಆದರೂ ಅವರು ಸಲ್ಲಿಸುತ್ತಿರುವ ಮಾತೃಹೃದಯದ ಸೇವೆ ಬೆಲೆಕಟ್ಟಲಾಗದ್ದು. ಎಲೆಮರೆಯ ಕಾಯಿಯಂತೆ ದುಡಿಯುತ್ತಿರುವ ಇಂತಹ ಶ್ರಮಜೀವಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಸೊಸೈಟಿಯು ಈ ಗೌರವಾರ್ಪಣೆ ಹಮ್ಮಿಕೊಂಡಿದ್ದು, ಎಲ್ಲಾ ಸಿಬ್ಬಂದಿಗಳಿಗೆ ಉತ್ತಮ ದರ್ಜೆಯ ಸೀರೆ ಹಾಗೂ ಇನ್ನಿತರ ಉಡುಗೊರೆಗಳನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತಕಾಮಾನಂದ ಸ್ವಾಮಿಗಳು, ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕಿ ಶ್ರೀಮತಿ ಭಾರತಿ ಜಿ. ಭಟ್, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಶ್ರೀ ಭಾಸ್ಕರ್ ದೇವಸ್ಯ ಹಾಗೂ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಈಶ್ವರ್ ಅವರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಪ್ರವೀಣ್ ಕುಮಾರಿ, ಮಧ್ಯಾಹ್ನ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಭವ್ಯ ಸೇರಿದಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸೊಸೈಟಿಯ ಅಧ್ಯಕ್ಷ ಗುರುರಾಜ್ ಅತಿಥಿಗಳನ್ನು ಸ್ವಾಗತಿಸಿದರೆ, ಮಂಗಳಾದೇವಿ ಶಾಖೆಯ ಸಿಬ್ಬಂದಿ ಕಾವ್ಯ ವಂದನಾರ್ಪಣೆ ಸಲ್ಲಿಸಿದರು. ಕುಸುಮಾ ಐತಾಳ್ ಅವರು ಗೌರವಾರ್ಪಣೆ ಹಾಗೂ ಉಡುಗೊರೆ ಸಮರ್ಪಣಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









