ಮಂಗಳೂರು: ಜಾತಿ-ಧರ್ಮಗಳ ಭೇದವಿಲ್ಲದೆ ಜನಸಾಮಾನ್ಯರಿಗೆ ನೇರವಾಗಿ ನೆರವಾಗಲು ಸಹಕಾರಿ ಕ್ಷೇತ್ರ ಅತ್ಯುತ್ತಮ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಸದೃಢಗೊಳಿಸುವ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ (ಕಾರವಾರ) ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವರು, ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಿದರು.
ಗ್ರಾಮೀಣ ಭಾಗದ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಸಂಘಟನೆಯ ಮೂಲ ಬೇರುಗಳಾಗಿವೆ. ಜಿಲ್ಲೆಯ ಯಾವೆಲ್ಲಾ ಗ್ರಾಮಗಳಲ್ಲಿ ಇದುವರೆಗೂ ಸಹಕಾರಿ ಸಂಘಗಳು ಅಸ್ತಿತ್ವಕ್ಕೆ ಬಂದಿಲ್ಲವೋ, ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಇಲಾಖಾ ಅಧಿಕಾರಿಗಳ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ತಾವು ಸಂಪೂರ್ಣ ಬದ್ಧರಾಗಿರುವುದಾಗಿ ತಿಳಿಸಿದರು.
2008ರಲ್ಲಿ ತಾವು ಸಹಕಾರ ಸಚಿವರಾಗಿದ್ದ ಅವಧಿಯಲ್ಲಿ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಲಾಗಿತ್ತು. ಆದರೆ, ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ನಿಗದಿತ ಅವಧಿಗೆ ಮುನ್ನ ಸಾಲ ಮರುಪಾವತಿಸುವ ರೈತರಿಗೆ ಶೇ.3ರಷ್ಟು ಹೆಚ್ಚುವರಿ ಸಹಾಯಧನ ಘೋಷಿಸಿತ್ತು. ಇದರಿಂದಾಗಿ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ಲಭ್ಯವಾಗುವಂತಾಯಿತು. ಈ ಐತಿಹಾಸಿಕ ಸತ್ಯವನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಕೆಲಸವಾಗಬೇಕು ಎಂದು ಸವದಿ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಲಭಿಸಿದ ಐತಿಹಾಸಿಕ ಹಿನ್ನೆಲೆಯನ್ನು ಸ್ಮರಿಸಿದ ಸಚಿವರು, ತುರ್ತು ಪರಿಸ್ಥಿತಿಯ ಬಳಿಕ ಚುನಾವಣಾ ಚಿಹ್ನೆಯ ವಿವಾದ ಎದುರಾದ ಸಂದರ್ಭದಲ್ಲಿ, ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆಯನ್ನು ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಜೈನ ಸಮುದಾಯದ ಬಹುದಿನಗಳ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ ಎಂಬ ಮಹತ್ವದ ಮಾಹಿತಿಯನ್ನು ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಸಚಿವ ಲಕ್ಷ್ಮಣ ಸವದಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಸಭೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ ಮತ್ತು ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಮುಖಂಡರಾದ ವಿಶ್ವಾಸ್ ದಾಸ್, ಶುಭೋದಯ ಆಳ್ವ ಸೇರಿದಂತೆ ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









