ಮಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಬಿಡಿಬಿಡಿಯಾಗಿ (ಚಿಲ್ಲರೆಯಾಗಿ) ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಸಹ, ಸಾರ್ವಜನಿಕ ಸ್ಥಳಗಳಲ್ಲಿ ಚಿಲ್ಲರೆಯಾಗಿ ಸಿಗರೇಟ್ ಮಾರಾಟ ಮಾಡುತ್ತಿರುವ ಹಾಗೂ ಹೋಟೆಲ್, ಕೆಫೆಗಳಲ್ಲಿ ಗ್ರಾಹಕರಿಗೆ ಧೂಮಪಾನ ಮಾಡಲು ಅವಕಾಶ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿಗಳನ್ನು ನಡೆಸಬೇಕು. ಕೋಟ್ಪಾ (COTPA – ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ರದ್ದುಗೊಳಿಸುವುದು ಸೇರಿದಂತೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಶರತ್ತು ವಿಧಿಸಿ ಅಂಗಡಿ, ಹೋಟೆಲ್ಗಳಿಗೆ ಲೈಸೆನ್ಸ್
ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಇನ್ನು ಮುಂದೆ ಹೊಸದಾಗಿ ಅಂಗಡಿ ಮತ್ತು ಹೋಟೆಲ್ಗಳಿಗೆ ವ್ಯಾಪಾರ ಪರವಾನಗಿ (ಲೈಸೆನ್ಸ್) ನೀಡುವಾಗ ಹಾಗೂ ನವೀಕರಿಸುವಾಗ, ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಚಿಲ್ಲರೆಯಾಗಿ (ಬಿಡಿಬಿಡಿಯಾಗಿ) ಮಾರಾಟ ಮಾಡುವಂತಿಲ್ಲ’ ಎಂಬ ಕಡ್ಡಾಯ ಶರತ್ತನ್ನು ವಿಧಿಸಿ ಪರವಾನಗಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಅವರು ಧೂಮಪಾನದಿಂದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳು ಮತ್ತು ಸಿಗರೆಟ್ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬರುತ್ತಿವೆ. ಇಂದಿನ ಹದಿಹರೆಯದವರು ಸಾಮಾಜಿಕ ಜಾಲತಾಣಗಳ ಆಕರ್ಷಣೆ ಹಾಗೂ ಪ್ರಭಾವಕ್ಕೆ ಒಳಗಾಗಿ ಇಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಲಾ-ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವನ್ನು ಸಂಪೂರ್ಣವಾಗಿ ನಿರ್ದೇಶಿಸಲಾಗಿದ್ದು, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಾರ್ಯಾಚರಣೆಗೆ ಪೊಲೀಸರು ಸಹಕರಿಸಲಿದ್ದಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ವಿರುದ್ಧ ಜಿಲ್ಲಾ ತಂಬಾಕು ನಿಯಂತ್ರಣ ಸಮಿತಿಯು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ನಿಯಮ ಉಲ್ಲಂಘಿಸಿದ ತಪ್ಪಿತಸ್ಥರಿಗೆ ಸೂಕ್ತ ದಂಡ ವಿಧಿಸುವುದರ ಜೊತೆಗೆ, ಅಂತಹ ಅಂಗಡಿಗಳ ಪರವಾನಗಿಯನ್ನು (ಲೈಸೆನ್ಸ್) ರದ್ದುಗೊಳಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆ ಆವರಣದೊಳಗೆ ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ತರುವುದು ಹಾಗೂ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿರ್ದೇಶಿಸಲಾಗಿದೆ. ಈ ನಿಯಮದ ಕಟ್ಟುನಿಟ್ಟಿನ ಪಾಲನೆಗಾಗಿ ಆಸ್ಪತ್ರೆ ಆವರಣದಲ್ಲಿ ಪ್ರತಿದಿನ ತಪಾಸಣೆ ಮತ್ತು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 4.0 ಕ್ಕೆ ಅಪರ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಈ ಅಭಿಯಾನ 60 ದಿನಗಳ ಕಾಲ ಅಭಿಯಾನ ಜಿಲ್ಲೆಯ ಶಾಲೆ – ಕಾಲೇಜುಗಳಲ್ಲಿ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









