ಮಂಗಳೂರು: ಪೊಲೀಸ್ ಸಿಬ್ಬಂದಿಯಿಂದ ನಡೆದಿದೆ ಎನ್ನಲಾದ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಿಳೆಯೊಬ್ಬರ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಆರೋಪದ ಮೇಲೆ ಸಹಾಯಕ ಪೊಲೀಸ್ ಉಪನಿರೀಕ್ಷಕರೊಬ್ಬರನ್ನು (ಎಎಸ್ಐ) ಸೇವೆಯಿಂದ ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡಿರುವ ಅಧಿಕಾರಿಯನ್ನು ಎಎಸ್ಐ ಅರುಣ್ ಆಳ್ವ ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಆಗಸ್ಟ್ 25ರಂದು ರಾತ್ರಿ ಸುಮಾರು 10 ಗಂಟೆಯ ವೇಳೆಗೆ ನೆಹರೂ ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ರವಿರಾಜ್ ಎಂಬ ಎಲೆಕ್ಟ್ರಿಷಿಯನ್ ಅವರನ್ನು ಅಡ್ಡಗಟ್ಟಿದ ಪೊಲೀಸ್ ಸಿಬ್ಬಂದಿ ಹಣ ದೋಚಿದ್ದಾರೆ ಎಂದು ದೂರಲಾಗಿತ್ತು. ಈ ಘಟನೆ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಎಎಸ್ಐ ಅರುಣ್ ಆಳ್ವ ಅವರೊಂದಿಗೆ ನಡೆಸಿದ್ದಾರೆ ಎನ್ನಲಾದ ಫೋನ್ ಕರೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಸಂಭಾಷಣೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಸಿಬ್ಬಂದಿಯ ಕುರಿತು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಆಡಿಯೋ ವೈರಲ್ ಆದ ಬೆನ್ನಲ್ಲೇ ತೀವ್ರ ವಿವಾದ ಸೃಷ್ಟಿಯಾಗಿದ್ದು, ಇಲಾಖೆಯ ಶಿಸ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಎಎಸ್ಐ ಅರುಣ್ ಆಳ್ವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









