ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಕಥೆ ಕಟ್ಟಿದ್ದ ಪತಿ ಸಂಜೀವ ನಾಯ್ಕ ಎಂಬಾತನಿಗೆ ಮಂಗಳೂರಿನ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2024ರ ಡಿಸೆಂಬರ್ 11ರಂದು ಈ ಘಟನೆ ನಡೆದಿದ್ದು, ಪೊಲೀಸರ ವಿಚಾರಣೆ ವೇಳೆ ಆರೋಪಿಯು ತಾನೇ ಕೊಲೆ ಮಾಡಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದನು.
ಘಟನೆ ನಡೆದ ದಿನ ಪತ್ನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ನೆರೆಹೊರೆಯವರನ್ನು ನಂಬಿಸಿದ್ದ ಆರೋಪಿ ಸಂಜೀವ ನಾಯ್ಕ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದನು. ಆದರೆ ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದರು. ಈ ವೇಳೆ ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳನ್ನು ಗಮನಿಸಿದ ವೈದ್ಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಅದರಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಸಮಗ್ರ ತನಿಖೆ ಕೈಗೊಂಡ ವಿಟ್ಲ ಪೊಲೀಸ್ ನಿರೀಕ್ಷಕ ನಾಗರಾಜ್ ಅವರು ಪೂರಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಸೆಕ್ಷನ್ 105 ಪಾರ್ಟ್ 2 ಅಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 5,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಸಜೆ ಅನುಭವಿಸುವಂತೆ ಹಾಗೂ ಸೆಕ್ಷನ್ 240ರ ಅಡಿಯಲ್ಲಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









