ಮಂಗಳೂರು: ದಾರ್ಶನಿಕರ ಜೀವನ ಗಾಥೆಗಳು ಮತ್ತು ವಾಣಿಗಳು ಸಮಾಜಕ್ಕೆ ಉತ್ತಮ ಬದುಕಿನ ದಾರಿದೀಪವಾಗಿದ್ದು, ಇನ್ನೂ ಸಾವಿರ ವರ್ಷಗಳು ಕಳೆದರೂ ಅವರ ಸಂದೇಶಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಳ್ಳುವುದಿಲ್ಲ. ಕನಕದಾಸರು ಸಮಾಜದಲ್ಲಿ ಸಮಾನತೆಯ ಹರಿಕಾರರಾಗಿ ಗುರುತಿಸಿಕೊಂಡವರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ತುಳು ಭವನದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಮಾತನಾಡಿ, ಇಂತಹ ಜಯಂತಿಗಳ ಆಚರಣೆಯು ಮಹಾನ್ ದಾರ್ಶನಿಕರ ಆದರ್ಶಗಳನ್ನು ಸ್ಮರಿಸುವುದರ ಜೊತೆಗೆ ಇಂದಿನ ಯುವ ಪೀಳಿಗೆಗೆ ಉತ್ತಮ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಶಿವಮೊಗ್ಗದ ಬಾಪೂಜಿ ನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ. ಮಂಜುನಾಥ್ ಎಂ.ಎಂ., ಕನಕದಾಸರು ಹುಟ್ಟಿನಿಂದಲೇ ತಮ್ಮ ವಿಶಿಷ್ಟ ವ್ಯಕ್ತಿತ್ವ ಹಾಗೂ ಆದರ್ಶ ಜೀವನದ ಮೂಲಕ ಜನಮನವನ್ನು ಗೆದ್ದವರು ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಕನಕದಾಸರು ತಮ್ಮ ಸರಳ ಕೀರ್ತನೆಗಳ ಮೂಲಕ ಜನಸಾಮಾನ್ಯರಿಗೂ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಭಕ್ತಿ ಹಾಗೂ ಆಧ್ಯಾತ್ಮಿಕ ಉನ್ನತಿಗೆ ಮಾರ್ಗದರ್ಶನ ನೀಡಿದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಕರಾವಳಿ ಕುರುಬರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಭೂಮರೆಡ್ಡಿ, ನಿರಂಜನ್, ಹಾಲುಮತ ಮಹಾಸಭಾದ ಗೌರವ ಅಧ್ಯಕ್ಷ ಮಲಿಯಪ್ಪ ಕರಿಯಪ್ಪ ಕಂಬ್ಳಿ, ಕರಾವಳಿ ಹಾಲುಮತ ಕುರುಬರ ಸಂಘದ ಅಧ್ಯಕ್ಷ ಚಂದ್ರಪ್ಪ ಬಿ.ಕೆ., ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾ ಅಧ್ಯಕ್ಷ ಯಮುನಪ್ಪ ಶಿರಹಟ್ಟಿ, ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರಿನ ನಿರ್ದೇಶಕ ಶಿವಾನಂದ ಯರಝೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ರಾಜೇಶ್ ಐ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಾರಣಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









