ಉಡುಪಿ : ಸಾಸ್ತಾನ ಸಮೀಪದ ಗುಂಡ್ಮಿ ಬಳಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ, ಗೋಕರ್ಣದಿಂದ ಉಡುಪಿ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕವನ್ನು ಜಿಗಿದು ಪಕ್ಕದ ಚರಂಡಿಗೆ ಪಲ್ಟಿಯಾಗಿದೆ. ಚರಂಡಿಗೆ ಬಿದ್ದ ಕೂಡಲೇ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿಗಳು ಕ್ಷಣಾರ್ಧದಲ್ಲಿ ಇಡೀ ವಾಹನವನ್ನು ಆವರಿಸಿಕೊಂಡಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ದುರ್ಘಟನೆಯಲ್ಲಿ ಆಟೋ ಚಾಲಕ ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಒಟ್ಟು ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಉಡುಪಿಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯ ಬಳಿಕ ಧಗಧಗಿಸುತ್ತಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









