ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಅಡಂ ಕುದ್ರು ಎಂಬಲ್ಲಿ ಇಂದು, ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಬೊಕ್ಕಪಟ್ಣ ಬೆಂಗ್ರೆ ನಿವಾಸಿ 62 ವರ್ಷದ ನಾಗೇಶ್ ಪುತ್ರನ್ ಎಂದು ಗುರುತಿಸಲಾಗಿದೆ. ತೊಕ್ಕೊಟ್ಟುವಿನಿಂದ ಮಂಗಳೂರಿನ ಕಡೆಗೆ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ಸೊಂದು ನಾಗೇಶ್ ಪುತ್ರನ್ ಅವರು ಚಲಾಯಿಸುತ್ತಿದ್ದ ಸ್ಕೂಟರ್ಗೆ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟ ನಾಗೇಶ್ ಅವರು ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ. ಹೆದ್ದಾರಿಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳ ನಿರ್ಲಕ್ಷ್ಯದ ಚಾಲನೆಯು ಮತ್ತೊಂದು ಅಮೂಲ್ಯ ಜೀವವನ್ನು ಬಲಿ ಪಡೆದಂತಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









