ನವದೆಹಲಿ: ಇಂದು ದೇಶದ ವಿವಿಧ ಭಾಗಗಳಲ್ಲಿ ಸುಮಾರು 2,900 ಕೆ.ಜಿ. ಸ್ಫೋಟಕಗಳು ಪತ್ತೆಯಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ (Red Fort) ಬಳಿ ಸಂಜೆ 6.55ರ ಸುಮಾರಿಗೆ ಸಂಭವಿಸಿದ ಭೀಕರ ಕಾರು ಸ್ಫೋಟವು ಆತಂಕ ಸೃಷ್ಟಿಸಿದೆ. ಈ ಘಟನೆಯಲ್ಲಿ ಇದುವರೆಗೂ 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಹಲವು ಮೃತದೇಹಗಳು ಛಿದ್ರ ಛಿದ್ರವಾಗಿವೆ. ಘಟನೆಯ ನಂತರ ಕಾರು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಪ್ರಸ್ತುತ 17 ಜನರು ಗಂಭೀರವಾಗಿ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಲಾಲ್ ಕಿಲಾ ಬಳಿಯ ಚಾಂದನಿ ಚೌಕ್ ಪ್ರದೇಶದಲ್ಲಿ, ನಿರ್ದಿಷ್ಟವಾಗಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಸಮೀಪ ಕಾರು ಸ್ಫೋಟ ಸಂಭವಿಸಿದೆ. ಸಂಜೆಯ ವೇಳೆ ಪ್ರವಾಸಿಗರಿಂದ ಮತ್ತು ಜನರಿಂದ ತುಂಬಿ ತುಳುಕುವ ಈ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಸ್ಫೋಟದಿಂದಾಗಿ ಪ್ರಾಥಮಿಕವಾಗಿ 3 ರಿಂದ 6 ಕಾರುಗಳು ಮತ್ತು 3 ಆಟೋಗಳು ಸೇರಿದಂತೆ ಅನೇಕ ವಾಹನಗಳು ಹೊತ್ತಿ ಉರಿದಿವೆ.
ಘಟನೆಯ ಮಾಹಿತಿ ತಿಳಿದ ಕೂಡಲೇ 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಕಾರ್ಯನಿರತವಾಗಿವೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತಕ್ಷಣಕ್ಕೆ ಮಾಹಿತಿ ತಿಳಿದುಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ಪಡೆ (NSG) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಂಡಗಳು ತಕ್ಷಣವೇ ಭೇಟಿ ನೀಡಿ, ಪರಿಶೀಲನೆ ಮತ್ತು ತನಿಖೆ ಆರಂಭಿಸಿವೆ.
ಘಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತಕ್ಷಣವೇ ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಷ್ಟ್ರೀಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









